

ಹಲಗೂರು: ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿ ಉಳಿವು ಕೇವಲ ಸರ್ಕಾರ ಅಥವಾ ಸಂಘ-ಸಂಸ್ಥೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನೂ ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಎಚ್.ಎಸ್.ಮುದ್ದೇಗೌಡ ಕರೆ ನೀಡಿದರು.
ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದಿಂದ ಗುರುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಹಾಗೂ ನಾಡು-ನುಡಿ ಮತ್ತು ಚಿಂತನೆ ವಿಷಯ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕತೆ ಭರಾಟೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವುದು ಆತಂಕದ ಸಂಗತಿ. ಕನ್ನಡ ಮಾತನಾಡುವಾಗ ಅನಗತ್ಯವಾಗಿ ಇಂಗ್ಲಿಷ್ ಪದಗಳನ್ನು ಬೆರೆಸಿ ಮಾತನಾಡುವ ಪ್ರವೃತ್ತಿ ಕೈಬಿಡಬೇಕು. ಕನ್ನಡವನ್ನು ಕೀಳರಿಮೆಯಿಂದ ನೋಡದೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಮಾತನಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಾತೃಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬರ ಮನೆಯಿಂದಲೇ ಆರಂಭವಾಗಬೇಕು ಎಂದರು.
ಮಕ್ಕಳಿಗೆ ಬಾಲ್ಯದಿಂದಲೇ ಕನ್ನಡ ಭಾಷೆ ಮೇಲಿನ ಪ್ರೀತಿ ಮತ್ತು ಅಭಿಮಾನ ಬೆಳೆಸಬೇಕು. ಮನೆಯಲ್ಲಿ ಕನ್ನಡ ಮಾತನಾಡುವುದು, ಕನ್ನಡ ಪುಸ್ತಕಗಳನ್ನು ಓದುವುದು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹಾಗೂ ಕನ್ನಡದ ಕವಿಗಳು, ಸಾಹಿತಿಗಳು ಮತ್ತು ಸಾಧಕರ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಕನ್ನಡ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಮುಂದಿನ ಪೀಳಿಗೆಗೂ ಭಾಷೆಯ ಶ್ರೀಮಂತ ಪರಂಪರೆಯನ್ನು ಪರಿಚಯಿಸಬೇಕು ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ತನ್ನದೇ ಆದ ಐತಿಹಾಸಿಕ ಹಿರಿಮೆಯಿದೆ. ಇಂತಹ ಸಾಂಸ್ಕೃತಿಕ ನೆಲದಲ್ಲಿ ಹುಟ್ಟಿರುವುದೇ ಹೆಮ್ಮೆಯ ಸಂಗತಿ. ಜಿಲ್ಲೆಯ ಜನಪದ ಪರಂಪರೆ, ರೈತಾಪಿ ಬದುಕು, ಸಾಹಿತ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ಒಗ್ಗಟ್ಟಿನ ಮನೋಭಾವ ಬೆಳೆದಾಗ ಮಾತ್ರ ಉತ್ತಮ ಬದಲಾವಣೆ ತರಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಎಚ್.ಎಸ್.ಮುದ್ದೇಗೌಡ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎನ್.ಎಸ್.ಶಂಕರೇಗೌಡ, ಪ್ರಾಧ್ಯಾಪಕ ಪ್ರೊ.ಸೀಮಾ ಕೌಸರ್, ತಾರಾ, ಜಯಲಕ್ಷ್ಮೀ, ಗುರುಪ್ರಸಾದ್, ಬಿ.ಸಿ.ರವಿ, ಕುಮಾರಸ್ವಾಮಿ, ಉಪನ್ಯಾಸಕರಾದ ಎಂ.ಎಚ್.ಮೂರ್ತಿ, ಕೆ.ಎಂ.ಭವ್ಯಾ, ಎಚ್.ಟಿ.ಸುಲೋಚನಾ ಇತರರು ಇದ್ದರು.