

ಮದ್ದೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಾರ್ಡನ್ ಹಾಗೂ ಅಧಿಕ್ಷಕನಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಶಿವರಾಜ್ ಅವರ ಮನೆಯ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ನಗರದ ಶಿವಪುರದ ಕೊಪ್ಪ ವೃತ್ತದ ಬಳಿಯ ವಿನಾಯಕ ಬಡಾವಣೆಯಲ್ಲಿರುವ ಮನೆ ಹಾಗೂ ತಾಲೂಕಿನ ಕೆಸ್ತೂರು ಬಳಿಯ ಅವಸರದಹಳ್ಳಿಯಲ್ಲಿರುವ ಫಾರ್ಮ್ ಹೌಸ್ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಸೋಮನಹಳ್ಳಿ ಮತ್ತು ಬೆಸಗರಹಳ್ಳಿಯ ಹಾಸ್ಟೆಲ್‌ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿವರಾಜು ಕಳೆದ ತಿಂಗಳಷ್ಟೇ ಸೇವೆಯಿಂದ ನಿವೃತ್ತರಾಗಿದ್ದರು.
ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ನಗದು, ಚಿನ್ನಾಭರಣ, ರೇಷ್ಮೆ ಸೇರೆಗಳು ಹಾಗೂ ಬೆಲೆಬಾಳುವ ವಸ್ತುಗಳು ಸೇರಿದಂತೆ ಸುಮಾರು 2 ಕೋಟಿ ರೂ. ಅಕ್ರಮ ಆಸ್ತಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಶಿವರಾಜ್ ಅವರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ಮಿನಿ ಬಾರ್ ಮಾದರಿಯಲ್ಲೇ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಶೇಖರಿಸಿಟ್ಟಿರುವುದು ಕಂಡು ಬಂದಿದೆ. ಇದನ್ನು ಕಂಡು ಲೋಕಾಯುಕ್ತ ಪೊಲೀಸರಿಗೆ ದಿಗ್ಬ್ರಮೆ ಹುಟ್ಟಿಸಿದೆ. ಅಲ್ಲದೆ, ಹಾಸ್ಟೆಲ್‌ನ ಬಡ ಮಕ್ಕಳಿಗೆ ವಿತರಿಸಬೇಕಿದ್ದ ಸರ್ಕಾರಿ ಪಠ್ಯಪುಸ್ತಕಗಳು, ನೋಟ್‌ಬುಕ್, ಹಾಸಿಗೆ ಹಾಗೂ ಬೆಡ್‌ಶೀಟ್‌ಗಳು, ಕೊಬ್ಬರಿ ಎಣ್ಣೆಯ ಡಬ್ಬಿಗಳೂ ಸೇರಿದಂತೆ ಹಲವು ವಸ್ತುಗಳು ಸಿಕ್ಕಿವೆ ಎನ್ನಲಾಗಿದೆ.
ಮಂಡ್ಯ ಲೋಕಾಯುಕ್ತ ಎಸ್.ಪಿ ಸುರೇಶ್ ಬಾಬು, ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ. ಅಧಿಕಾರಿಗಳು ಸಿಕ್ಕಿರುವ ಆಸ್ತಿಗಳ ದಾಖಲೆ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.