ನೀರು ನಿರ್ವಹಣೆಯಲ್ಲಿ ನೀರುಗಂಟಿಗಳ ಪಾತ್ರ ಮಹತ್ವದ್ದು

ಜಿಪಂ ಸಿಇಒ ಕೆ.ಆರ್.ನಂದಿನಿ ಅಭಿಪ್ರಾಯ
zpceo k.r.nandini meeting
ಕೆ.ಆರ್.ಪೇಟೆ ತಾಲೂಕಿನ ನೀರುಗಂಟಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಉದ್ಘಾಟಿಸಿದರು. ಸುಷ್ಮಾ, ರಶ್ಮಿ, ಪ್ರವೀಣ್ ಇದ್ದರು. #zpceo#k.r.nandini#meeting
Published on: 

ಕೆ.ಆರ್.ಪೇಟೆ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಹಾಗೂ ನಿರಂತರ ಪೂರೈಕೆಯಲ್ಲಿ ನೀರುಗಂಟಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅಭಿಪ್ರಾಯಪಟ್ಟರು.

ತಾಲೂಕಿನ 34 ಗ್ರಾಮ ಪಂಚಾಯಿತಿಗಳ ಆಯ್ದ ನೀರುಗಂಟಿಗಳಿಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ನೀರು ನಿರ್ವಹಣೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದ್ದು, ಅವುಗಳ ನಿರ್ವಹಣೆಯ ಜವಾಬ್ದಾರಿ ಪಂಚಾಯಿತಿಗಳ ಮೇಲಿದೆ. ಈ ಹಿನ್ನೆಲೆಯಲ್ಲಿ ನೀರುಗಂಟಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು.

ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಮಸ್ಯೆ ಉಂಟಾದಾಗ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಅಧಿಕಾರಿಗಳು ಇದೇ ವೇಳೆ ಮಾಹಿತಿ ನೀಡಿದರು.

ಕುಡಿಯುವ ನೀರಿನ ಪೈಪ್‌ಲೈನ್‌ಗಳ ಸೋರಿಕೆ ಹಾಗೂ ಹಾನಿಯನ್ನು ತ್ವರಿತವಾಗಿ ಸರಿಪಡಿಸಲು ಬಳಸುವ ಎಲೆಕ್ಟ್ರೋ ಫ್ಯೂಷನ್ ಯಂತ್ರದ ಕಾರ್ಯ ನಿರ್ವಹಣೆ ಕುರಿತು ನೀರುಗಂಟಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು.

ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಪೈಪ್‌ಲೈನ್‌ಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಸಣ್ಣಪುಟ್ಟ ದುರಸ್ತಿಗಳನ್ನು ತಕ್ಷಣ ಕೈಗೊಂಡು ನೀರು ಸರಬರಾಜು ವ್ಯವಸ್ಥೆಯನ್ನು ಸುಗಮವಾಗಿಡಬೇಕು. ಈ ನಿಟ್ಟಿನಲ್ಲಿ ತರಬೇತಿಯಲ್ಲಿ ಪಡೆದ ತಾಂತ್ರಿಕ ಜ್ಞಾನವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಿಇಒ ಸೂಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ, ಎಇಇ ರಶ್ಮಿ, ಎಇ ಪ್ರವೀಣ್ ಸೇರಿದಂತೆ ಅಧಿಕಾರಿಗಳು ಹಾಗೂ ನೀರುಗಂಟಿಗಳು ಇದ್ದರು.