ಪ್ರಜಾಸೇವೆಯಲ್ಲಿನ ಅರ್ಜಿಗಳ ನಿರ್ಲಕ್ಷೃ ಬೇಡ

ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿಕೆ
ನಾಗಮಂಗಲ ತಾಲೂಕಿನ ತುಪ್ಪದಮಡು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಸಾರ್ವಜನಿಕರ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದರು. ಸಿಇಒ ಕೆ.ಆರ್.ನಂದಿನಿ, ಶಿವಮೂರ್ತಿ, ಅಶೋಕ್ ಇದ್ದರು.
ನಾಗಮಂಗಲ ತಾಲೂಕಿನ ತುಪ್ಪದಮಡು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಸಾರ್ವಜನಿಕರ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದರು. ಸಿಇಒ ಕೆ.ಆರ್.ನಂದಿನಿ, ಶಿವಮೂರ್ತಿ, ಅಶೋಕ್ ಇದ್ದರು.
Published on: 

ನಾಗಮಂಗಲ: ಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಅಧಿಕಾರಿಗಳು ನಿರ್ಲಕ್ಷಿಸದೆ ಗಂಭೀರವಾಗಿ ಪರಿಗಣಿಸಿ, ಯಾವುದೇ ಅರ್ಜಿಗಳು ಅನಗತ್ಯವಾಗಿ ಬಾಕಿ ಉಳಿಯದಂತೆ ಕಾನೂನಾತ್ಮಕವಾಗಿ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ತಾಲೂಕಿನ ಕಸಬಾ ಹೋಬಳಿಯ ತುಪ್ಪದ ಮಡು ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 60ಕ್ಕೂ ಹೆಚ್ಚು ಆಂದೋಲನಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗಿದೆ. ಪ್ರಜಾಸೇವೆಯಲ್ಲಿ ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿ ವೈಯಕ್ತಿಕ ಜವಾಬ್ದಾರಿ ವಹಿಸಿ ಅರ್ಜಿಯನ್ನು ಇತ್ಯರ್ಥಗೊಳಿಸಬೇಕು ಎಂದರು.

ಒಂದಕ್ಕಿಂತ ಹೆಚ್ಚು ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಯಾದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರಿಗೆ ತ್ವರಿತ ಸೇವೆ ಒದಗಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಅಧಿಕಾರಿಗಳೇ ಜನರ ಬಳಿಗೆ ತೆರಳಬೇಕು. ಅಹವಾಲುಗಳನ್ನು ಸ್ವೀಕರಿಸಿ, ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬೇಕು. ತಕ್ಷಣ ಪರಿಹರಿಸಲು ಸಾಧ್ಯವಾಗದ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ಪ್ರಜಾಸೇವೆಯಲ್ಲಿ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಮತ್ತೆ ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

1.45 ಲಕ್ಷ ಇ-ಪೌತಿ ಖಾತೆ ಸಿದ್ಧ: ಸಾರ್ವಜನಿಕರು ಇ-ಪೌತಿ ಖಾತೆ ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪೌತಿ ಖಾತೆ ಆಂದೋಲನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಅಗತ್ಯ ವಿವರಗಳನ್ನು ಸಂಗ್ರಹಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಪೌತಿ ಖಾತೆ ಸಿದ್ಧಪಡಿಸುತ್ತಿದ್ದಾರೆ. ಕಳೆದ ಆರು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಪ್ರತ್ಯೇಕವಾಗಿ ಅರ್ಜಿ ಪಡೆಯದೆ ಲಭ್ಯವಿರುವ ದಾಖಲೆಗಳು ಹಾಗೂ ಗಣಕೀಕೃತ ಮಾಹಿತಿಯ ಆಧಾರದ ಮೇಲೆ ಸ್ವಯಂಪ್ರೇರಿತವಾಗಿ 1.45 ಲಕ್ಷಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಸಿದ್ಧಪಡಿಸಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಹಾಗೂ ಆಡಳಿತವನ್ನು ಜನಸ್ನೇಹಿಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನದಲ್ಲಿ ಸಾರ್ವಜನಿಕರು ಪಂಚಾಯತ್‌ರಾಜ್, ಕಂದಾಯ, ಸೆಸ್ಕ್, ಅರಣ್ಯ ಸೇರಿದಂತೆ ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಆಂದೋಲನದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭ ಜಿ.ಪಂ.ಸಿಇಒ ಕೆ.ಆರ್.ನಂದಿನಿ, ಪಾಂಡವಪುರ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ, ತಹಸೀಲ್ದಾರ್ ಅಶೋಕ್, ತಾ.ಪಂ.ಇಒ ಸತೀಶ್ ಸೇರಿದಂತೆ ಮತ್ತಿತರಿದ್ದರು.