ಮನೋದೈಹಿಕ ವಿಕಸನಕ್ಕೆ ಕ್ರೀಡೆ ಪೂರಕ

ಮನ್‌ಮುಲ್ ಅಧ್ಯಕ್ಷ ಎಂ.ಕೆ.ಹರೀಶ್ ಅಭಿಮತ
ತಾಲೂಕು ಮಟ್ಟದ ಕ್ರೀಡಾಕೂಟ
ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಮನ್‌ಮುಲ್ ಅಧ್ಯಕ್ಷ ಹರೀಶ್‌ಬಾಬು ಉದ್ಘಾಟಿಸಿದರು. ಧನಂಜಯ, ಎಚ್.ಆರ್.ಅನಂತೇಗೌಡ, ರಾಜೇಶ್ವರಿ, ನಾಗೇಶ್, ಹೇಮಾವತಿ, ಲೋಕೇಶ್ ಇತರರು ಇದ್ದರು.
Published on

ಮದ್ದೂರು: ಮಕ್ಕಳು ಶಾಲಾ ಹಂತದಲ್ಲೇ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಕ್ರೀಡಾಪಟುಗಳು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮನ್ ಮುಲ್ ಅಧ್ಯಕ್ಷ ಎಂ.ಕೆ.ಹರೀಶ್ ಬಾಬು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಕೆ.ಬೆಳ್ಳೂರು ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವತಿಯಿಂದ ಆಯೋಜಿಸಿದ್ದ 14 ರಿಂದ 17 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗದೆ ಕ್ರೀಡೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ನಮಗೆ ಕಲಿಸಿಕೊಡುತ್ತದೆ. ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವಿಕಸನಕ್ಕೆ ಕ್ರೀಡೆಗಳು ಪೂರಕವಾಗಿದ್ದು, ಗ್ರಾಮೀಣ ಭಾಗದ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿದರೆ ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದರು.

ಈಗಾಗಲೇ ಶಾಸಕ ಕೆ.ಎಂ.ಉದಯ್ ಅವರು ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪರಿಕರಗಳು ಸೇರಿದಂತೆ ಶಾಲಾ ಶುಲ್ಕವನ್ನು ಭರಿಸುವ ಜತೆಗೆ ವಸತಿ ಶಾಲೆಗಳು, ಶಾಲಾ ಕಾಲೇಜುಗಳ ಕಟ್ಟಡ ಸೇರಿದಂತೆ ಶೈಕ್ಷಣಿಕ ಕ್ಷೇತ್ರಕ್ಕೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಇಒ ಎಸ್.ಬಿ.ಧನಂಜಯ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಎರಡು ದಿನಗಳ ಕ್ರೀಡಾಕೂಟದಲ್ಲಿ ತಾಲೂಕಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳ 120ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಅಥ್ಲೆಟಿಕ್ಸ್, ಕಬಡ್ಡಿ, ಖೋಖೋ, ವಾಲಿಬಾಲ್, ಥ್ರೋಬಾಲ್, ಗುಂಪು ಆಟೋಟ ಸೇರಿದಂತೆ ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಕ್ಷೇತ್ರ ಸಮನ್ವಯಾಧಿಕಾರಿ ನಾಗೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅನಂತೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಹೇಮಾವತಿ, ದೈಹಿಕ ಶಿಕ್ಷಣ ಪರಿವೀಕ್ಷಕ ಲೋಕೇಶ್, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ್, ಮುಖ್ಯಶಿಕ್ಷಕ ಕುಮಾರ್, ಮೋಹನ್, ಪ್ರದೀಪ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net