

ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಸ್ನೇಹಿತರ ಒತ್ತಡ ಅಥವಾ ಕುತೂಹಲಕ್ಕೆ ಒಳಗಾಗಿ ಮಾದಕ ವಸ್ತುಗಳ ಪ್ರಯೋಗಕ್ಕೆ ಮುಂದಾಗಬಾರದು. ಶಿಕ್ಷಣ, ಶಿಸ್ತು, ಕ್ರೀಡೆ ಹಾಗೂ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ದೇವರಾಜು ಸಲಹೆ ನೀಡಿದರು.
ಪಟ್ಟಣದ ಗ್ರಾಮ ಭಾರತಿ ವಿದ್ಯಾಸಂಸ್ಥೆಯ ಎಸ್.ಕೆ.ಚಿಕ್ಕಣ್ಣಗೌಡ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ 1985ರ ಮಾದಕ ದ್ರವ್ಯಗಳು ಮತ್ತು ಅಮಲು ಪದಾರ್ಥಗಳ ಅಕ್ರಮ ಸಾಗಣೆ ತಡೆ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆಯಡಿ ಮಾದಕ ವಸ್ತುಗಳ ಅಕ್ರಮ ಉತ್ಪಾದನೆ, ಮಾರಾಟ, ಖರೀದಿ, ಸಂಗ್ರಹಣೆ ಮತ್ತು ಸಾಗಣೆ ಸೇರಿದಂತೆ ನಿಷೇಧಿತ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದರು.
ಯಾರಾದರೂ ಮಾದಕವಸ್ತು ಸೇವಿಸುವಂತೆ ಒತ್ತಾಯಿಸಿದರೆ ಧೈರ್ಯವಾಗಿ ನಿರಾಕರಿಸಬೇಕು. ಅಂತಹ ಸಂದರ್ಭಗಳಲ್ಲಿ ಪಾಲಕರು, ಶಿಕ್ಷಕರು ಅಥವಾ ಸಂಬಂಧಪಟ್ಟ ಅಧಿಕಾರಿಗಳ ನೆರವು ಪಡೆಯಬೇಕು. ಪಾಲಕರು ಮಕ್ಕಳ ವರ್ತನೆಯಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮಕ್ಕಳೊಂದಿಗೆ ಸ್ನೇಹಪೂರ್ಣ ವಾತಾವರಣ ನಿರ್ಮಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಕಿವಿಮಾತು ಹೇಳಿದರು.
ಮಾದಕ ವಸ್ತು ವ್ಯಸನಕ್ಕೆ ಒಳಗಾದವರನ್ನು ಸಮಾಜದಿಂದ ದೂರವಿಡುವುದು ಅಥವಾ ಅವಮಾನಿಸುವುದು ಪರಿಹಾರವಲ್ಲ. ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ, ಆಪ್ತ ಸಮಾಲೋಚನೆ ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸುವುದು ಮುಖ್ಯ. ಶಿಕ್ಷಣ ಸಂಸ್ಥೆಗಳು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜತೆಗೆ ಪೊಲೀಸ್, ಆರೋಗ್ಯ ಮತ್ತು ಕಾನೂನು ಸೇವಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಡಾ.ಚಾಂದಿನಿ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳು ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸುವ ಮಹತ್ವದ ಕಾರ್ಯ ಮಾಡುತ್ತಿವೆ. ಸಾರ್ವಜನಿಕರಿಗೆ ಹಕ್ಕುಗಳು, ಕರ್ತವ್ಯಗಳು ಮತ್ತು ಕಾನೂನಿನ ಕುರಿತು ತಿಳಿವಳಿಕೆ ನೀಡುವುದು ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ. ಕಾನೂನು ಅರಿವು ಪುಸ್ತಕಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದಲ್ಲೂ ಅಳವಡಿಕೆಯಾಗಬೇಕು. ಕಾನೂನನ್ನು ಗೌರವಿಸುವ ಹಾಗೂ ಇತರರ ಹಕ್ಕುಗಳನ್ನು ರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಎರಡನೇ ಅಪರ ಸಿವಿಲ್ ನ್ಯಾಯಾಧೀಶೆ ಸುಷ್ಮಾ, ಗ್ರಾಮಭಾರತಿ ವಿದ್ಯಾಸಂಸ್ಥೆಯ ಶೈಕ್ಷಣಿಕ ಮುಖ್ಯಸ್ಥ ಡಾ.ಲೋಕಪ್ರಕಾಶ್ ನಾರಾಯಣ್, ಪಟ್ಟಣ ಪೊಲೀಸ್ ಇನ್ಸ್ಪೆಕ್ಟರ್ ಎಂ.ಸುನಿಲ್ ಕುಮಾರ್, ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಯಮುನಾ, ವಕೀಲರ ಸಂಘದ ಉಪಾಧ್ಯಕ್ಷ ಪುರುಷೋತ್ತಮ್, ಜಂಟಿ ಕಾರ್ಯದರ್ಶಿ ಎನ್.ದೊಡ್ಡಯ್ಯ, ಸುಪ್ರೀತಾ, ಗಿರಿಜಾ ಇತರರು ಇದ್ದರು.