ಮುಖ್ಯಮಂತ್ರಿ ಜಿಲ್ಲೆಗೆ ಮೊದಲ ಬಾರಿಗೆ ಆಗಮನ

ಶಾಸಕ ಎಂ.ಉದಯ್ ಹೇಳಿಕೆ, ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ
ಮದ್ದೂರಿನ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು, ಹರೀಶ್‌ಬಾಬು, ಸಿ.ಚಲುವರಾಜು, ಅಣ್ಣೂರು ರಾಜೀವ್, ಬಿ.ಬಸವರಾಜು, ಕದಲೂರು ರಾಮಕೃಷ್ಣ, ಕಂಠಿ ಸುರೇಶ್ ಇದ್ದರು.
ಮದ್ದೂರಿನ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು, ಹರೀಶ್‌ಬಾಬು, ಸಿ.ಚಲುವರಾಜು, ಅಣ್ಣೂರು ರಾಜೀವ್, ಬಿ.ಬಸವರಾಜು, ಕದಲೂರು ರಾಮಕೃಷ್ಣ, ಕಂಠಿ ಸುರೇಶ್ ಇದ್ದರು.
Published on: 

ಮದ್ದೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ಟೋಬರ್ 31 ರಂದು ಮಂಡ್ಯ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.

ನಗರದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲೂಕಿನ ಹಾಗೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಕೈ ಬಲಪಡಿಸುವ ಉದ್ದೇಶದಿಂದ ತಾಲೂಕಿನಾದ್ಯಂತ ಸುಮಾರು 25 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಿ ಅವರಿಗೆ ಅಭೂತಪೂರ್ವ ಸ್ವಾಗತ ಕೋರಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 2 ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ನೀಡಿದೆ. ಮುಂದಿನ ದಿನಗಳಲ್ಲಿ 1300 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವಾಗಿ ಮದ್ದೂರಿಗೆ ಕರೆಸಿ ಸಾಧನಾ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗುವುದು ಎಂದು ತಿಳಿಸಿದರು.

ಶೀಘ್ರವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಇಂದಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಬಲಗೊಳಿಸುವ ಜತೆಗೆ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿಗಳ ಬಗ್ಗೆ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.

ಕಳೆದ 25 ವರ್ಷಗಳಿಂದ ಕ್ಷೇತ್ರದಲ್ಲಿ ಆಗದ ಕೆಲಸವನ್ನು ಜನರ ಒತ್ತಾಸೆಯಂತೆ ಹಂತ ಹಂತವಾಗಿ ಕೆಲಸ ಮಾಡಲಾಗುತ್ತಿದೆ. ಇಲಾಖಾವಾರು ಬಾಕಿ ಇರುವ ಕೆಲಸಗಳನ್ನು ಈಗಾಗಲೇ ಅಧಿಕಾರಿಗಳು ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕಳೆದ 3 ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಹಾಗೂ ಗ್ಯಾರಂಟಿ ಯೋಜನೆಗಳಿಗೆ 5 ಸಾವಿರ ಕೋಟಿ ರೂ. ಸೇರಿದಂತೆ ಒಟ್ಟು 15 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಮೂಲಕ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಅನುದಾನ ನೀಡಿ ಇತಿಹಾಸ ನಿರ್ಮಾಣ ಮಾಡಿದೆ ಎಂದರು.

ಶನಿವಾರ ನಡೆಯಲಿರುವ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಜಿಲ್ಲಾದ್ಯಂತ ನಡೆಯುತ್ತಿರುವ 2 ಸಾವಿರ ಕೋಟಿ ರೂ.ಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅದರಲ್ಲೂ ನೀರಾವರಿ ಇಲಾಖೆಗೆ ಸಿಂಹಪಾಲು ನೀಡಿದ್ದು, ಜಿಲ್ಲೆಯ ರೈತರು ಹಿತದೃಷ್ಟಿಯಿಂದ ಮತ್ತಷ್ಟು ನೀರಾವರಿ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮನ್‌ಮುಲ್ ಅಧ್ಯಕ್ಷ ಹರೀಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಚಲುವರಾಜು, ಅಣ್ಣೂರು ರಾಜೀವ್, ಮುಖಂಡರಾದ ಸ್ವಾರ್ ಚಂದ್ರು, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮನ್ ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್‌ಕುಮಾರ್, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಎಚ್.ಎಲ್.ಸತೀಶ್, ಮಹದೇವಯ್ಯ, ಮಮತಾ ಶಂಕರೇಗೌಡ, ಇಂತಿಯಾಜ್, ಪ್ರಸನ್ನಕುಮಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net