

ಮಳವಳ್ಳಿ: ಪಟ್ಟಣದ ಎನ್‌ಇಎಸ್ ಬಡಾವಣೆಯಲ್ಲಿ ಸೋಮವಾರ ಸಂಜೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಕಿರುಕುಳ ನೀಡಿದ್ದರಿಂದ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಪಟ್ಟಣದ ಎನ್‌ಇಎಸ್ ಬಡಾವಣೆಯ ಲೇ. ಮಹದೇವಯ್ಯ ಅವರ ಪುತ್ರ ಅಭಿಜಿತ್(22) ಮೃತ. ತಂದೆಯ ಮರಣದ ನಂತರ ಕುಟುಂಬದ ನಿರ್ವಹಣೆ ನೋಡಿಕೊಳ್ಳುತ್ತಿದ್ದ ಅಭಿಜಿತ್, ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದ ಎನ್ನಲಾಗಿದೆ. ಪ್ರತಿ ತಿಂಗಳು ಕಂತಿನ ಹಣವನ್ನು ಸಕಾಲಕ್ಕೆ ಕಟ್ಟಿಕೊಂಡು ಬರುತ್ತಿದ್ದು, ಈ ತಿಂಗಳ ಕಂತು ಕಟ್ಟಲು ಸ್ವಲ್ಪ ತಡವಾದ ಕಾರಣ ಕಂಪನಿ ಸಿಬ್ಬಂದಿ ಹೊತ್ತಲ್ಲದ ಹೊತ್ತಲ್ಲಿ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮನೆ ಬಳಿ ಬಂದು ಗಲಾಟೆ ಮಾಡುವ ಬೆದರಿಕೆ ಹಾಕುತ್ತಿದ್ದರು ಎಂದು ಹೇಳಲಾಗಿದೆ.
ಇದರಿಂದ ಮನನೊಂದ ಅಭಿಜಿತ್ ಸೋಮವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಸಾವಿಗೆ ಫೈನಾನ್ಸ್ ಕಂಪನಿಯ ಕಿರುಕುಳವೇ ಕಾರಣ ಎಂದು ಮೃತನ ಅಣ್ಣ ಅಭಿಷೇಕ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ದಲಿತ ಸಂಘಟನೆಗಳ ಮುಖಂಡರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಕಿರುಕುಳ ನೀಡಿದ ಕಂಪನಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸಂಜೆ 5 ಗಂಟೆಗೆ ತಾಲೂಕು ಕಚೇರಿ ಮುಂದೆ ಜಮಾಯಿಸಿದ ಮುಖಂಡರು, ಕಂಪನಿ ವಿರುದ್ಧ ಹಾಗೂ ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಮುಖಂಡರಾದ ಹಾಡ್ಲಿ ಸುರೇಶ್, ಅನ್ನದಾನಿ ಅವರು, ತಾಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮಿತಿ ಮೀರಿದೆ. ಕಂತು ತಡವಾದ ನೆಪದಲ್ಲಿ ಯುವಕರಿಗೆ ಕಿರುಕುಳ ನೀಡಿ ಸಾವಿಗೆ ದೂಡುತ್ತಿರುವುದು ಖಂಡನೀಯ. ಕೂಡಲೇ ಕಂಪನಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ಲೋಕೇಶ್ ಅವರು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು. ಪ್ರತಿಭಟನೆಯಲ್ಲಿ ಮುಖಂಡರಾದ ಬಸವರಾಜು, ಜಯಚಂದ್ರ ಮತ್ತಿತರರು ಭಾಗವಹಿಸಿದ್ದರು.