ವಿದ್ಯಾರ್ಥಿಗಳ ಭವಿಷ್ಯವನ್ನು ಶಿಕ್ಷಕರು ಉತ್ತಮವಾಗಿಸಲಿ

ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಸಲಹೆ
ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಬಿ.ಎಸ್.ಶಿವಣ್ಣ, ಪ್ರೊ.ಕೃಷ್ಣೇಗೌಡ, ಡಾ.ಕುಮಾರ ಇದ್ದರು.
ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಬಿ.ಎಸ್.ಶಿವಣ್ಣ, ಪ್ರೊ.ಕೃಷ್ಣೇಗೌಡ, ಡಾ.ಕುಮಾರ ಇದ್ದರು.
Published on: 

ಮಳವಳ್ಳಿ: ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿಸಲು ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸುವ ಮೂಲಕ ಸಮಾಜದಲ್ಲಿನ ಘಾತುಕ ಶಕ್ತಿಗಳನ್ನು ದೂರ ಮಾಡಬೇಕು ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಸಲಹೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣವನ್ನು ಹಂಚುವ ಜವಾಬ್ದಾರಿಯನ್ನು ಶಿಕ್ಷಕರಿಗೆ ಸಂವಿಧಾನದಡಿ ನೀಡಲಾಗಿದೆ. ಕೇವಲ ಶಿಕ್ಷಣ ನೀಡುವ ಶಿಕ್ಷಕರಾಗದೆ ಬದುಕನ್ನು ಕಲಿಸುವ ಗುರುವಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಶಿಕ್ಷಕ ವೃತ್ತಿಯನ್ನು ಗೌರವವಿರಬೇಕು. ವೃತ್ತಿಯಿಂದ ನಿವೃತ್ತರಾದರೂ ಪ್ರವೃತ್ತಿಯಿಂದ ಸಮಾಜಕ್ಕೆ ಬೆಳಕು ನೀಡುವ ಮಾರ್ಗದರ್ಶಕರಾಗಬೇಕು ಎಂದರು.

ಸಾಹಿತಿ ಪ್ರೊ.ಕೃಷ್ಣೇಗೌಡ ಮಾತನಾಡಿ, ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರು ಜಾತಿ, ಧರ್ಮ, ಗಂಡು-ಹೆಣ್ಣು ಎನ್ನದೆ ಶಿಕ್ಷಣ ನೀಡಿದ ಮಹಾತಾಯಿ. ಮೇಲ್ವರ್ಗದ ಅವಮಾನ ಸಹಿಸಿಕೊಂಡು ಶಿಕ್ಷಣ ನೀಡಿದ ಕಾರಣ ಇಂದಿಗೂ ಅವರನ್ನು ಸ್ಮರಿಸುತ್ತೇವೆ ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಎಸ್.ಶಿವಣ್ಣ ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಾಲ ಮನ್ನಾ ಮಾಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಲೋಕೇಶ್, ತಾಪಂ ಇಒ ಶ್ರೀನಿವಾಸ್, ಡಿವೈಎಸ್ಪಿ ಯಶವಂತಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಡಯಟ್ ಉಪ ನಿರ್ದೇಶಕ ಕೆ. ಯೋಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net