ಮಾದಕ ವಸ್ತು ಎಂಡಿಎಂಎ ಮಾರಾಟ ಇಬ್ಬರ ಬಂಧನ

mng--22 sep Abdul Azeez
Published on

ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರ ತಂಡ ಶುಕ್ರವಾರ ಬಂಧಿಸಿದೆ.


ಉಪ್ಪಿನಂಗಡಿ ತೆಕ್ಕಾರು ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31), ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಬಂಧಿತರು. ಆರೋಪಿಗಳಿಂದ ಒಟ್ಟು 35 ಗ್ರಾಂ ತೂಕದ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್, ನಗದು 600 ರೂ. ಮತ್ತು ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1,96,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಬಂಧಿತರು ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿ ಬಂಧಿಸಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರಕರಣ ದಾಖಲಾಗಿದೆ. ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net