

ಮಂಗಳೂರು: ರಾಜ್ಯ ಬಿಜೆಪಿಯ ಮಹತ್ವದ ರಾಜ್ಯ ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸಭೆ ನ.5ರಂದು ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ 10ರಿಂದ ಸಂಜೆ 5.30ವರೆಗೆ ನಡೆಯುವ ಕಾರ್ಯಕಾರಿಣಿಯಲ್ಲಿ ಪಕ್ಷದ ಕೋರ್ ಕಮಿಟಿ ಸದಸ್ಯರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ವಿವಿಧ ಪ್ರಕೋಷ್ಠದ ಸಂಚಾಲಕರು, ಸಹ ಸಂಚಾಲಕರು, ವಿಭಾಗ ಪ್ರಭಾರಿಗಳು, ಸಹ ಪ್ರಭಾರಿಗಳ ಸಹಿತ 120ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ. ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾರ್ಗದರ್ಶನ ನೀಡಲಿದ್ದಾರೆ.
ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಲ್ಹಾದ ಜೋಶಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕರಾವಳಿ ಜಿಲ್ಲೆಗಳಿಂದ ವಿವಿಧ ಪ್ರಕೋಷ್ಠಗಳ ಪ್ರಮುಖರಾದ ಸಂಜೀವ ಮಠಂದೂರು, ಪ್ರತಾಪ್ಸಿಂಹ ನಾಯಕ್, ಪ್ರದೀಪ್ ಪೈ, ಯಶ್ಪಾಲ್ ಸುವರ್ಣ, ಪ್ರೇಮಾನಂದ ಶೆಟ್ಟಿ, ರವೀಂದ್ರ ಪೈ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಪಕ್ಷ ಸಂಘಟನೆ, ಮುಂದಿನ ಕಾರ್ಯಯೋಜನೆ ಚರ್ಚೆ: ಉದ್ಘಾಟನಾ ಸಮಾರಂಭದ ಬಳಿಕ ವಿವಿಧ ವಿಭಾಗ ಗಳ ಮುಖಂಡರ ಪ್ರತ್ಯೇಕ ಸಭೆಗಳು ನಡೆಯಲಿವೆ. ಪ್ರಮುಖವಾಗಿ ಪಕ್ಷ ಸಂಘಟನೆ, ಮುಂದಿನ ಕಾರ್ಯಯೋಜನೆ, ಅಭಿವೃದ್ಧಿ ವಿಚಾರಗಳ ಚರ್ಚೆ ನಡೆಯಲಿದೆ. ಚರ್ಚೆಗೊಳಪಡುವ ವಿಚಾರ, ಕಾರ್ಯ ಯೋಜನೆಗಳು ಮುಂದೆ ವಿವಿಧ ಹಂತಗಳಲ್ಲಿ ಅನುಷ್ಠಾನಕ್ಕೆ ಬರಲಿವೆ. ಕಾರ್ಯಕಾರಿಣಿ ಯಶಸ್ಸಿಗೆ 16 ವಿಭಾಗಗಳನ್ನು ಮಾಡಲಾಗಿದ್ದು ಸಿದ್ಧತೆ ಸಾಗಿದೆ. ಈಗಾಗಲೆ 2-3 ಸುತ್ತಿನ ಸಭೆಗಳು ನಡೆದಿವೆ. ನಗರದ ಅಲಂಕಾರ, ಗಣ್ಯರಿಗೆ ಊಟ, ವಸತಿ ವ್ಯವಸ್ಥೆಯನ್ನು ಸುಸಜ್ಜಿತವಾಗಿ ಮಾಡಲಾಗುತ್ತಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.