

ಮಂಗಳೂರು: ಕ್ರೀಡಾಕೂಟಗಳಲ್ಲಿ ಭಾಗಿಯಾಗುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ ಎಂದು ಎ.ಜೆ. ಆಸ್ಪತ್ರೆಯ ವೈದ್ಯ ಡಾ.ಕಿಶನ್ ರಾವ್ ಬಾಳಿಲ ಹೇಳಿದರು.
ಗೃಹರಕ್ಷಕರಿಗೆ ಮೇರಿಹಿಲ್ನಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಬುಧವಾರ ಅವರು ಮಾತನಾಡಿದರು.
ಕ್ರೀಡೆಯಿಂದ ಬಾಂಧವ್ಯ ವೃದ್ಧಿಸುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಈ ಕ್ರೀಡಾಕೂಟ ಅವಶ್ಯಕ. ಆಟದಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದರು.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ. ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಯಲ್ಲಿ ವ್ಯಕ್ತಿ ಗೆಲ್ಲುವುದಲ್ಲ, ಆಟ ಗೆಲ್ಲಬೇಕು. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೆದ್ದವರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಗೆದ್ದವರು ರಾಜ್ಯಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆದ್ದವರಿಗೆ ಇಲಾಖೆಯಿಂದ ನೀಡುವ ಬಹುಮಾನದ ಜೊತೆಗೆ ವೈಯಕ್ತಿಕವಾಗಿ ನಗದು ಬಹುಮಾನ ನೀಡಲಾಗುವುದು ಎಂದರು.
ಗೃಹರಕ್ಷಕ ದಳದ ಮಂಗಳೂರು ಘಟಕದ ಘಟಕಾಧಿಕಾರಿ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್ ಸೆರಾ ಸ್ವಾಗತಿಸಿದರು. ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಸುಖಿತಾ ಎ. ಶೆಟ್ಟಿ ಮತ್ತು ಬಂಟ್ವಾಳ ಘಟಕದ ಗೃಹರಕ್ಷಕಿ ನಂದನ ಕುಮಾರಿ ಪ್ರಾರ್ಥಿಸಿದರು. ಜಿಲ್ಲಾ ಗೃಹರಕ್ಷಕ ದಳದ 50 ಮಂದಿ ಗೃಹರಕ್ಷಕರು ಆಯ್ಕೆಯಾಗಿ ಪಶ್ಚಿಮ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದರು.