ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

va
Published on

ಮಂಗಳೂರು: ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುವ ಕಾರಣ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು. ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.'


ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೆರಾ, ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕಾೃನರ್ ಕಲ್ಪಿಸಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು.


ಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬಿಡಬೇಕು. ಪ್ರಯಾಣ ಭತ್ಯೆ ದರವನ್ನು 500 ರೂ. ಗಳಿಂದ 3 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು.ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮಂಜೂರು ಮಾಡಬೇಕು. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಬೇಕು. ಪ್ರೊಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳ ಕೈ ಬಿಡುವಂತೆ ಸೂಕ್ತ ಆದೇಶ ಜಾರಿಗೊಳಿಸಬೇಕು. ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡಬೇಕು. ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸಬೇಕು ಮೊದಲಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಸಂಘದ ಗೌರವಾಧ್ಯಕ್ಷ ದಿನೇಶ್ ಕುಮಾರ್, ಜಿಲ್ಲಾ ಅಧ್ಯಕ್ಷ ಕೆ.ಸಂತೋಷ್, ತಾಲೂಕು ಅಧ್ಯಕ್ಷ ಉಮೇಶ್ ಬೆಡಸೂರು, ಉಪಾಧ್ಯಕ್ಷ ಮೆಹಬೂಬ್, ಕಾರ್ಯದರ್ಶಿ ಪ್ರೀತಿ, ಕ್ರೀಡಾ ಕಾರ್ಯದರ್ಶಿ ಕರುಣಾಕರ, ಖಜಾಂಚಿ ಪ್ರದೀಪ್ ಶೆಟಿ, ಸಾಂಸ್ಕೃತಿಕ ಕಾರ್ಯದರ್ಶಿ ನಿಧಿಶ್ರೀ ಸಾಲ್ಯಾನ್, ರಾಜ್ಯ ಪ್ರತಿನಿಧಿ ಅವಿನಾಶ್ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net