ಯೋಗಕ್ಕೆ ಜಾಗತಿಕ ಮನ್ನಣೆ ಅಂ.ರಾ. ಯೋಗ ದಿನಾಚರಣೆ ಉದ್ಘಾಟಿಸಿ ಶಾಸಕ ವೇದವ್ಯಾಸ ಕಾಮತ್

townhall
Published on

ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಿಂದ ಯೋಗಕ್ಕೆ ಜಾಗತಿಕ ಮನ್ನಣೆ ಸಿಕ್ಕಿದೆ. ಯೋಗದಿಂದ
ಮನಸು ಹಾಗೂ ಅರೋಗ್ಯಕ್ಕೂ ಬಹುದೊಡ್ಡ ಲಾಭ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯುಷ್ ವಿದ್ಯಾಲಯಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಶುಕ್ರವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಉದ್ಘಾಟಿಸಿ, ಅವರು ಮಾತನಾಡಿದರು.


ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ, ಎಸ್ಪಿ ರಿಷ್ಯಂತ್ ಸಿ.ಬಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ಜೆಸಿಂತಾ, ಗೃಹರಕ್ಷಕದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು, ಎಸಿಪಿ ಗೀತಾ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.


ಬಳಿಕ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಯೋಗ ನಡೆಯಿತು. ವಿವಿಧ ಆಯುಷ್ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಸದಸ್ಯರು, ಯೋಗಪಟುಗಳು ಯೋಗ ಪ್ರದರ್ಶನ ನೀಡಿದರು. ವಿಶೇಷವಾಗಿ ಶಾಸಕರು, ಮೇಯರ್, ಜಿಲ್ಲಾಧಿಕಾರಿಗಳು ಹಾಗೂ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಗೆ ಸಾಥ್ ನೀಡಿದರು.


ಯೋಗ ಶಿಕ್ಷಕರು ಆಸನಗಳ ನಿರ್ದೇಶನಗಳನ್ನು ನೀಡಿದರು. ಆಸನಗಳ ನಿರ್ದೇಶನಕ್ಕೆ ತಕ್ಕಂತೆ ಗಣ್ಯರು, ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಮಾಡಿದರು. ಯೋಗ ಕಾರ್ಯಕ್ರಮದಲ್ಲಿ ಪೊಲೀಸ್ ಸಿ.ಐ.ಎಸ್.ಎಫ್ ಸಿಬಂದಿ, ಗೃಹರಕ್ಷಕದಳ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net