

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನ. 1ರಂದು ನೆಹರೂ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಸೂಚಿಸಿದ್ದಾರೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಎಲ್ಲ ಇಲಾಖೆಗಳು ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ನಡೆಸಿ ಯಾವುದೇ ಲೋಪಗಳಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ, ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಮಹಾನಗರ ಪಾಲಿಕೆ ಉಪ ಆಯುಕ್ತ ಗಿರೀಶ್ ನಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರಾಜೇಶ್ ಜಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.