ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ -ಸ್ಥಳ ಮಹಜರು ಮೇಲೆ ಪೊಲೀಸರ ಮೇಲೆ ಹಲ್ಲೆ - ಆರೋಪಿಗೆ ಬಿತ್ತು ಗುಂಡು

shoot out
Published on

ಮಂಗಳೂರು: ಕೋಟೆಕಾರು ಕೆ.ಸಿ.ರೋಡ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ನಿವಾಸಿ ಕಣ್ಣನ್ ಮಣಿ (36) ಎಂಬಾತನ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ಸಂಜೆ ಗುಂಡಿನ ದಾಳಿ ನಡೆಸಿದ್ದಾರೆ.

ಕರ್ನಾಟಕ - ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಸಂಜೆ 4.20ರ ವೇಳೆಗೆ ಈ ಘಟನೆ ನಡೆದಿದೆ. ಉಳ್ಳಾಲ ಠಾಣೆ ಇನ್‌ಸ್ಪೆಕ್ಟರ್ ಬಾಲಕೃಷ್ಣ ಎಚ್.ಎನ್. ಅವರು ಇತರ ತನಿಖಾ ತಂಡದ ಜತೆ ಆರೋಪಿಯನ್ನು ಕರೆ ತಂದು ಸ್ಥಳ ಮಹಜರು ನಡೆಸುತ್ತಿದ್ದರು. ಈ ಸಂದರ್ಭ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆರೋಪಿ ಸ್ಥಳದಲ್ಲಿ ಬಿದ್ದುಕೊಂಡಿದ್ದ ಬಿಯರ್ ಬಾಟಲಿ ಒಡೆದು ಪೊಲೀಸರಾದ ಆಂಜನಪ್ಪ ಮತ್ತು ನಿತಿನ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದ ತನಿಖಾಧಿಕಾರಿ ಉಳ್ಳಾಲ ಇನ್‌ಸ್ಪೆಕ್ಟರ್ ಅವರಿಗೆ ಇರಿಯಲು ಯತ್ನಿಸಿದ್ದಾನೆ. ಈ ಸಂದರ್ಭ ಸಿಸಿಬಿ ಇನ್‌ಸ್ಪೆಕ್ಟರ್ ಆತನಿಗೆ ಎಚ್ಚರಿಕೆ ನೀಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ ಆರೋಪಿ ಇದಕ್ಕೆ ಮಣಿಯದೆ ಹಲ್ಲೆ ಮುಂದುವರಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ವಶಕ್ಕೆ ಪಡೆದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಗಿದೆ.

ಘಟನೆಯಲ್ಲಿ ಉಳ್ಳಾಲ ಇನ್‌ಸ್ಪೆಕ್ಟರ್ ಬಾಲಕೃಷ್ಣ ಎಚ್.ಎನ್., ಸಿಸಿಬಿ ಕಾನ್‌ಸ್ಟೇಬಲ್ ಆಂಜನಪ್ಪ, ಉಳ್ಳಾಲ ಠಾಣೆ ಕಾನ್‌ಸ್ಟೇಬಲ್ ನಿತಿನ್ ಗಾಯಗೊಂಡಿದ್ದು, ಅವರನ್ನೂ ದೇರಳಕಟ್ಟೆ ಯೇನಪೋಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net