

ಮಂಗಳೂರು : ನಿಷೇಧಿತ ಮಾದಕ ವಸ್ತು ಡ್ರಗ್ಸ್ ಮಾರಾಟ ಮಾಡುತ್ತಿದ್ದ ತೊಕ್ಕೊಟ್ಟಿನ ಮೊಹಮ್ಮದ್ ಇರ್ಷಾದ್(28)ನನ್ನು ಶುಕ್ರವಾರದಂದು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪರಾಧ ಪತ್ತೆದಳದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿತನಿಂದ 70 ಸಾವಿರ ರೂ. ಮೌಲ್ಯದ 12 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ ಹಾಗೂ ಮೊಬೈಲ್ ೆನ್ ಸೇರಿದಂತೆ 80ಸಾವಿರ ರೂಪಾಯಿಗೂ ಅಧಿಕ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗವಾರ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆರವರ ನೇತೃತ್ವದಲ್ಲಿ ಆರೋಪಿಯ ಬಂಧನ ಕಾರ್ಯಾಚರಣೆ ನಡೆಸಲಾಗಿದೆ.