ರಂಗಮಂದಿರ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಉಸ್ತುವಾರಿ ಸಚಿವರ ಸೂಚನೆ

mng--5 Feb Ranga mandira
Published on

ಮಂಗಳೂರು: ನಗರದ ಬೋಂದೆಲ್‌ನಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಬುಧವಾರ ರಂಗಮಂದಿರ ನಿರ್ಮಾಣ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಂಗಮಂದಿರ ನಿರ್ಮಾಣಕ್ಕಾಗಿ 9.95 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಸರ್ಕಾರದಿಂದ ಅನುಮೋದನೆ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರದ ಅನುಮೋದನೆ ನಂತರ ಮಂಗಳೂರು ಮಹಾನಗರಪಾಲಿಕೆಯು ಕಾಮಗಾರಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಚಿವರು ತಿಳಿಸಿದರು. ರಂಗಮಂದಿರ ಯೋಜನೆಯ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಯೋಜನೆಯ ವಿನ್ಯಾಸದ ಕುರಿತು ಚರ್ಚಿಸಿದರು. ಸಂಪೂರ್ಣ ಸುಸಜ್ಜಿತವಾದ ರಂಗಮಂದಿರ ನಿರ್ಮಾಣವಾಗಬೇಕಿದ್ದು, ಯಾವುದೇ ಕೊರತೆ ಇಲ್ಲದಂತೆ ಪೂರ್ಣಗೊಳಿಸಬೇಕು. ಕಲಾ ಚಟುವಟಿಕೆಗಳಿಗೆ ಪೂರಕವಾದ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕಾಮಗಾರಿ ನಡೆಸಬೇಕು ಎಂದು ದಿನೇಶ್ ಗುಂಡೂರಾವ್ ಸೂಚಿಸಿದರು.

ಲಭ್ಯವಿರುವ 9.95 ಕೋಟಿ ರೂ. ಅನುದಾನವನ್ನು ಬಳಸಿಕೊಂಡು ರಂಗಮಂದಿರವನ್ನು ಪೂರ್ಣಗೊಳಿಸಬೇಕು. ಮುಂದಿನ ಆಂತರಿಕ ವಿನ್ಯಾಸ, ಧ್ವನಿ ಬೆಳಕು ಹಾಗೂ ಇತರ ಅಂತಿಮ ಕಾರ್ಯಗಳಿಗೆ ಬೇಕಾಗುವ ಹೆಚ್ಚುವರಿ ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಗಳು ಬಿಡುಗಡೆ ಮಾಡಲು ಅಗತ್ಯ ಕ್ರಮ ವಹಿಸುವಂತೆ ಉಸ್ತುವಾರಿ ಸಚಿವರು ತಿಳಿಸಿದರು.

ನಗರದ ಬೋಂದೆಲ್‌ನ ಈ ಜಾಗವು ರಂಗಮಂದಿರ ನಿರ್ಮಾಣಕ್ಕೆ ಸೂಕ್ತವಾಗಿರುವುದರಿಂದ ಇದಕ್ಕೆ ಸಂಪರ್ಕ ರಸ್ತೆ ಹಾಗೂ ಇತರ ಮೂಲಸೌಕರ್ಯಗಳನ್ನು ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಎಂ.ಪಿ. ಅವರು ರಂಗಮಂದಿರದ ಯೋಜನೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ., ಜಿಲ್ಲಾ ವಾರ್ತಾಧಿಕಾರಿ ಬಿ. ಎ. ಖಾದರ್ ಶಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net