

Mangaluru: ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಂತರ ಇದೀಗ ಮತ್ತೋರ್ವ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆಯಾಗಿದ್ದು, ಘಟನೆಯ ದೃಶ್ಯ ಸ್ಥಳೀಯರ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮತ್ತೆ ಮಂಗಳೂರಿನಲ್ಲಿ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕಿಡಿಗೇಡಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಸಮೀಪ ಸುಹಾಸ್ ಶೆಟ್ಟಿ ಮೇಲೆ ಏಕಾಏಕಿ ದಾಳಿ ನಡೆಸಿ, ಮಚ್ಚಿನಿಂದ ಕೊಲೆ ಮಾಡಲಾಗಿದೆ. ಈ ಘಟನೆ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರಿನ ಎ.ಜೆ. ಆಸ್ಪತ್ರೆ ಬಳಿ ಅಪಾರ ಸಂಖ್ಯೆಯ ಹಿಂದೂ ಕಾರ್ಯಕರ್ತರು ಆಗಮಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 2022ರಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ಫಾಜಿಲ್ ಕೊಲೆ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ (ಮೇ.01) ರಾತ್ರಿ 8.27ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಪ್ರದೇಶದಲ್ಲಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.
ಕೊಲೆ ಪ್ರಕರಣ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಮೃತ ಸುಹಾಸ್ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿಗಳು ಉಲ್ಲೇಖಿಸಿವೆ.