

Mangaluru: ಪ್ರವೀಣ್ ನೆಟ್ಟಾರು ಹತ್ಯೆ ನಂತರ ಮತ್ತೆ ಮಂಗಳೂರಿನಲ್ಲಿ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕಿಡಿಗೇಡಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಸಮೀಪ ಸುಹಾಸ್ ಶೆಟ್ಟಿ ಮೇಲೆ ಏಕಾಏಕಿ ದಾಳಿ ನಡೆಸಿ, ಮಚ್ಚಿನಿಂದ ಕೊಲೆ ಮಾಡಲಾಗಿದೆ. ಈ ಘಟನೆ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
2022ರಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ಫಾಜಿಲ್ ಕೊಲೆ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ (ಮೇ.01) ರಾತ್ರಿ 8.27ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಪ್ರದೇಶದಲ್ಲಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. ಸದ್ಯ ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕೊಲೆ ಪ್ರಕರಣ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯಿಂದ ಕೆರಳಿರುವ ವಿಶ್ವ ಹಿಂದೂ ಪರಿಷತ್, ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಘಟನೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷರನೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಮೇ.2ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಿಎನ್ಎಸ್ ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ. ಬಂದ್ ಕಾರಣ ವ್ಯಾಪಾರ-ವಹಿವಾಟು, ಖಾಸಗಿ ಮತ್ತು ಸಾರಿಗೆ ಬಸ್ಗಳ ಸಂಚಾರ ಯಾವುದೂ ಇಂದು ಸಂಜೆ 6 ರವರೆಗೆ ಇರುವುದಿಲ್ಲ ಎಂದು ಹೇಳಲಾಗಿದೆ.
ಮೃತ ಸುಹಾಸ್ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿಗಳು ಉಲ್ಲೇಖಿಸಿವೆ.