ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳನ್ನ ಆರ್ಥಿಕವಾಗಿ ಸಧೃಡಗೊಳಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

Manual scavengers meeting mandya
Published on

ಮಂಡ್ಯ: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಒದಗಿಸುವ ಮೂಲಕ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳ ವೃತ್ತಿ ನಿಷೇಧ ಮತ್ತು ಅವರ ಪುನರ್ ವಸತಿ ಕಾಯ್ದೆ-2013 ರ ಹಾಗೂ ನಿಯಮ-2023 ರನ್ನು ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಕುಟುಂಬದ ಮಕ್ಕಳು ವಂಶ ಪಾರಂಪರ್ಯವಾಗಿ ಅದೇ ವೃತ್ತಿಯನ್ನು ಮಾಡದೇ, ಅದನ್ನು ಹೊರತುಪಡಿಸಿ ಅವರ ಆಸಕ್ತಿ ಹಾಗೂ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಕೌಶಲಾಧಾರಿತ ತರಬೇತಿ ನೀಡಿ ಉದ್ಯೋಗ ಕಲ್ಪಿಸಬೇಕು. ತರಬೇತಿ ನೀಡುವ ಮೊದಲು ಅವರ ಆಸಕ್ತಿಯ ಬಗ್ಗೆ ಸರ್ವೇ ನಡೆಸಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 567 ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳನ್ನು ಗುರುತಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 280 ಜನರನ್ನು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗುರುತಿಸಿ ಚೀಟಿ ನೀಡಲಾಗಿರುತ್ತದೆ. ಮಾನ್ಯುಯಲ್ ಸ್ಕ್ಯಾವೆಂಜರ್ ಹಾಗೂ ಅವರ ಕುಟುಂಬಗಳಲ್ಲಿರುವ ಮಕ್ಕಳಿಗೆ ನಿಯಮನುಸಾರ ಪುನರ್‌ವಸತಿ, ಶಿಕ್ಷಣ, ವಿದ್ಯಾರ್ಥಿ ವೇತನ ಇನ್ನಿತರೆ ಸೌಲಭ್ಯ ಕಲ್ಪಿಸಿ ಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಪರಿಶೀಲಿಸಿ, ಸರ್ಕಾರದಿಂದ ಬರುವ ಸೌಲಭ್ಯವನ್ನು ದೊರಕಿಸಬೇಕು. ನಿವೇಶನ ಹೊಂದಿರುವ ಹಾಗೂ ನಿವೇಶನ ರಹಿತ ಕುಟುಂಬಗಳ ಬಗ್ಗೆ ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಲ್ಲಿಸಬೇಕು. ನಿವೇಶನ ರಹಿತ ಕುಟುಂಬಗಳಿಗೆ ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ನೀಡಲಾಗುವುದು. ನಗರ ಸ್ಥಳೀಯ ಸಂಸ್ಥೆಗಳ ಆಯವ್ಯಯದಲ್ಲಿ ಈಗಾಗಲೇ ಪೌರಕಾರ್ಮಿಕರ ಆರೋಗ್ಯ ತಪಾಸಣೆಗಾಗಿ ಅನುದಾನ ಮೀಸಲಿಡಲಾಗಿದೆ. ಸಮಿತಿಯ ಸದಸ್ಯರು ಪೌರಕಾರ್ಮಿಕರು ಆರೋಗ್ಯ ತಪಾಸಣೆಗೆ ಒಳಪಟ್ಟಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪ್ರಕರಣದ ಬಗ್ಗೆ ದೂರು ಬಂದ ತಕ್ಷಣ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದ ಪರಿಶೀಲನಾಧಿಕಾರಿ ತುರ್ತಾಗಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಆಯೋಗಕ್ಕೆ ವರದಿ ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ಬಗ್ಗೆ ತಹಸೀಲ್ದಾರ್ ಹಾಗೂ ತಾಪಂ ಸಿಇಒ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಬೇಕು. ಮ್ಯಾನ್ಯುಯಲ್ ಸ್ಕಾೃವೆಂಜರ್ಸ್ ಹಾಗೂ ಮೃತಪಟ್ಟಿರುವ ಸ್ಕಾೃವೆಂಜರ್ಸ್ ಮಕ್ಕಳಿಗೆ ನ.1ರಂದು ಪ್ರತಿಭಾ ಪುರಸ್ಕಾರ ನೀಡಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಪೌರ ಕಾರ್ಮಿಕರ ಮಕ್ಕಳಿಗೆ ಶೇ.5ರಷ್ಟು ಪ್ರವೇಶ ಕಲ್ಪಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2017-18ನೇ ಸಾಲಿನಲ್ಲಿ ವಿಶೇಷ ನೇರ ನೇಮಕಾತಿ ಅಡಿ 85 ಜನ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗಿರುತ್ತದೆ. 2022-23ನೇ ಸಾಲಿನಲ್ಲಿ 103 ಜನ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಅವರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಉಪವಿಭಾಗಾಧಿಕಾರಿ ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಪೌರಾಯುಕ್ತ ಆರ್.ಮಂಜುನಾಥ್, ರಾಜ್ಯ ಸಫಾಯಿ ಕರ್ಮಚಾರಿ ಮೇಲುಸ್ತುವಾರಿ ಸದಸ್ಯ ಡಿ.ಆರ್.ರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net