

ಮಂಡ್ಯ: ಎಚ್‌ಐವಿ ಮತ್ತು ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸೇವಾ ಸೌಲಭ್ಯದ ಮಾಹಿತಿ ನೀಡಲು ನಗರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು.
ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ಗೆ ವಿವಿಧ ಕಾಲೇಜುಗಳಿಂದ 17 ರಿಂದ 25 ವರ್ಷದೊಳಗಿನ ಸುಮಾರು 250 ಕ್ಕಿಂತ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಿಂದ ಮ್ಯಾರಥಾನ್‌ಗೆ ಚಾಲನೆ ನೀಡಲಾಯಿತು. ಬಳಿಕ ಪ್ರಮುಖ ರಸ್ತೆಗಳ ಮೂಲಕ ಸಾಗಿ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಯುವ ಜನೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಮ್ಯಾರಥಾನ್ ಸ್ಪರ್ಧೆಯ ಮೂಲಕ ಸಾರ್ವಜನಿಕರಿಗೆ ಎಚ್‌ಐವಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಏಡ್ಸ್ ಕಾಯಿಲೆಯ ಬಗ್ಗೆ ಮಾಹಿತಿಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಹಾಯವಾಣಿ 1097 ಯನ್ನು ಪರಿಚಯಿಸಲಾಗುತ್ತಿದೆ ಎಂದರು.
ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಬಹುದು. ಯಾವುದೇ ರೋಗವನ್ನು ತಡೆಗಟ್ಟಲು ಅದರ ಬಗ್ಗೆ ಅರಿವು ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕಾರಾಗೃಹದ ಅಧೀಕ್ಷಕ ಟಿ.ಕೆ.ಲೋಕೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಜನರು ರೋಗಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಯುವಜನರ ಮೂಲಕವೇ ಸಂದೇಶ ಸಾರಲಾಗುತ್ತಿದೆ. ಸಾರ್ವಜನಿಕರು ಎಚ್‌ಐವಿ ಸೋಂಕು ತಗಲುವ ಕಾರಣಗಳನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ ಮಾತನಾಡಿ, ಮ್ಯಾರಥಾನ್ ಬಳಿಕ ಸೆ.19ರಂದು ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು. ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಸೀತಾಲಕ್ಷ್ಮೀ, ಯುವಜನ ಸೇವಾ ಹಾಗೂ ಕ್ರೀಡಾ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಜಿ.ಓಂಪ್ರಕಾಶ್ ಇತರರಿದ್ದರು.