ಭಾರತೀಯ ಕಿಸಾನ್ ಸಂಘದಿಂದ ಮೆರವಣಿಗೆ

ಭಾರತೀಯ ಕಿಸಾನ್ ಸಂಘದಿಂದ ಮೆರವಣಿಗೆ
Published on

ಹಾಸನ: ರಾಜ್ಯಾದ್ಯಂತ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲವಾಗಿ, ಹಾಸನ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಸದಸ್ಯರು ಮೆರವಣಿಗೆ ನಡೆಸಿ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿ, ಕಬ್ಬಿಗೆ ವೈಜ್ಞಾನಿಕ ಹಾಗೂ ನ್ಯಾಯಸಮ್ಮತ ಬೆಲೆ ನೀಡಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಉಪಾಧ್ಯಕ್ಷ ಸಣ್ಣೇಗೌಡ ಮಾತನಾಡಿ, ವರ್ಷಪೂರ್ತಿ ಕಷ್ಟಪಟ್ಟು ಬೆಳೆಯುವ ರೈತರಿಗೆ ಸರಿಯಾದ ದರ ಸಿಗದೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಈಗಾಗಲೇ ನಡೆಯುತ್ತಿರುವ ಪ್ರತಿಭಟನೆಗಳತ್ತ ಗಮನಹರಿಸದೆ ಕಣ್ಣು ಮುಚ್ಚಿ ಕುಳಿತಿದೆ. ತಕ್ಷಣ ಎಚ್ಚೆತ್ತುಕೊಂಡು ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಪ್ರತಿ ಟನ್ ಕಬ್ಬಿಗೆ 3 ಸಾವಿರ ರೂ. ನೀಡಲಾಗುತ್ತಿದ್ದು, ಬೆಳೆ ವೆಚ್ಚ ಮತ್ತು ಕೂಲಿ ಖರ್ಚುಗಳ ಹಿನ್ನೆಲೆಯಲ್ಲಿ ಇದು ಅತ್ಯಂತ ಕಡಿಮೆ ದರವಾಗಿದೆ. ಮಹಾರಾಷ್ಟ್ರದಲ್ಲಿ 3,600 ರೂ. ನೀಡಲಾಗುತ್ತಿದೆ. ಕರ್ನಾಟಕದಲ್ಲೂ ಕನಿಷ್ಠ 3,500 ರೂ. ನಿಗದಿಪಡಿಸಬೇಕು. ಸರ್ಕಾರ ಕಬ್ಬು ನಿಯಂತ್ರಣ ಮಂಡಳಿಯ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಸಮಾನ ದರ ನಿಗದಿಪಡಿಸಬೇಕು. ಬೇಡಿಕೆ ಈಡೇರಿಸದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಪ್ಪ, ಕುಮಾರಸ್ವಾಮಿ, ರಾಜು, ಚಂದ್ರಗೌಡ, ಸರೋಜಮ್ಮ, ಕೃಷ್ಣ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net