

ಹನೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿಯೂ ಮರಿತಿಬ್ಬೇಗೌಡ ಅವರು ಜಯ ಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್. ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆಯ ಸಭಾಂಗಣದಲ್ಲಿ ಸೋಮವಾರ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆಯ ಬಳಿ ಆಗಮಿಸಿದ ಅವರು ಶಿಕ್ಷಕರಲ್ಲಿ ಮತಯಾಚಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಈಗಾಗಲೇ ಸತತವಾಗಿ 4 ಬಾರಿ ಜಯ ಗಳಿಸಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಸದನದಲ್ಲಿ ಧ್ವನಿ ಎತ್ತುವುದರ ಮೂಲಕ ಸ್ಪಂದಿಸಿದ್ದಾರೆ. ಜತೆಗೆ ಪ್ರಸ್ತುತ ಇರುವ ಶಿಕ್ಷಕರ ಸಮಸ್ಯೆಗಳ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಶಿಕ್ಷಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಹಾಗಾಗಿ ಈ ಬಾರಿಯೂ ಮರಿತಿಬ್ಬೇಗೌಡ ಅವರು ಜಯ ಗಳಿಸುವುದರಲ್ಲಿ ಎರಡು ಮಾತಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹನೂರಿನ ಮುಕುಂದವರ್ಮ, ರಾಮಾಪುರದ ಈಶ್ವರ್, ಯೂತ್ ಕಾಂಗ್ರೆಸ್ ಟೌನ್ ಅಧ್ಯಕ್ಷ ಮಾದೇಶ್, ಎಸ್ಸಿ ಬ್ಲಾಕ್ ಅಧ್ಯಕ್ಷ ಸಂಪತ್‌ಕುಮಾರ್, ರಾಮಲಿಂಗಂ, ಕಾರ್ಯದರ್ಶಿ ಸಿದ್ದರಾಜು ಇತರರು ಇದ್ದರು.