ಮದುವೆ 200ಕ್ಕಿಂತ ಹೆಚ್ಚು ಜನ ಸೇರಿದರೆ ಮೊಕದ್ದಮೆ: ಜಿಲ್ಲಾಧಿಕಾರಿ ಜಿ. ಜಗದೀಶ್

jagadeesh
Published on

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗಳ ಬೆಡ್‌ಗಳು ಖಾಲಿ ಇವೆ. ಆದರೆ ಸಾರ್ವಜನಿಕರ ನಿರ್ಲಕ್ಷೃದಿಂದ ಮತ್ತೆ ಪ್ರಕರಣ ಹೆಚ್ಚಳವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಮದುವೆ ಸಮಾರಂಭಕ್ಕೆ 200ಕ್ಕಿಂತ ಹೆಚ್ಚು ಜನ ಸೇರಿದರೆ ಅನುಮತಿ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ 200 ಮಂದಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಆದರೆ 300-400 ಮಂದಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡು ಬಂದಿದೆ. ಕಾರ್ಯಕ್ರಮಕ್ಕೆ ತಹಸೀಲ್ದಾರ್‌ಗಳು ಅನುಮತಿ ನೀಡುವ ಸಂದರ್ಭದಲ್ಲಿ ನೋಡಲ್ ಅಧಿಕಾರಿ ನೇಮಿಸಲು ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ ಕಂಡುಬಂದರೆ ಅಧಿಕಾರಿ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿ ಮಾಸ್ಕ್‌ಗಳನ್ನು ಸರಿಯಾಗಿ ಹಾಕಿಕೊಳ್ಳದಿದ್ದರೆ ಪರವಾನಗಿ ತಾತ್ಕಾಲಿಕ ರದ್ದತಿಗೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಬಸ್‌ಗಳಲ್ಲಿ ಡ್ರೈವರ್ ಮತ್ತು ಕಂಡಕ್ಟರ್ ಮತ್ತು ಪ್ರಯಾಣಿಕರಿಗೆ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. ಪ್ರತಿ ಟ್ರಿಪ್‌ಗೆ ಸ್ಯಾನಿಟೈಸ್ ಮಾಡಬೇಕು. ಈ ಸೂಚನೆಗಳನ್ನು ಪಾಲಿಸದಿದ್ದರೆ ಕಠಿಣ ಕಾನೂನುಕ್ರಮಕ್ಕೆ ಹಿಂಜರಿಯುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net