

ಮಸ್ಕಿ: ಸರ್ಕಾರ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಕ್ಷೇತ್ರಕ್ಕೆ ಬರುವ ಅನುದಾನ, ಕಾಮಗಾರಿಗಳಿಗೆ ಅಡ್ಡಿಪಡಿಸುವ ಮೂಲಕ ಕ್ಷೇತ್ರ ಅಭಿವೃದ್ಧಿ ಆಗದಂತೆ ಮಾಡುತ್ತಿದ್ದಾರೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಆರೋಪಿಸಿದರು.
ಉಪಚುನಾವಣೆಯಲ್ಲಿ ಗೆದ್ದ ನಂತರ ಇರುವ ಅಲ್ಪ ಅವಧಿಯಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ ಅನುದಾನ ತರಲಾಗುತ್ತಿದೆ. ಆದರೆ, ಪ್ರತಾಪಗೌಡ ಪಾಟೀಲ ಕ್ಷೇತ್ರಕ್ಕೆ ಬರುವ ಅನುದಾನ ತಪ್ಪಿಸುತ್ತಿದ್ದಾರೆ. ಸರ್ಕಾರವೂ ಮಸ್ಕಿ ಕ್ಷೇತ್ರದ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ದೂರಿದರು.
ಅಧಿಕಾರಿಗಳ ಮೇಲೆ ಮಾಜಿ ಶಾಸಕರ ಒತ್ತಡದಿಂದಾಗಿ ಹಲವು ಕೆಲಸಗಳು ಕುಂಠಿತಗೊಂಡಿವೆ. ಪಟ್ಟಣದ ವಿಭಜಕ, ರಸ್ತೆ ಅಗಲೀಕರಣ ಕಾಮಗಾರಿ ಟೆಂಡರ್ ಆಗಿದ್ದರೂ ಗುತ್ತಿಗೆದಾರರು ರಾಜಕೀಯ ಒತ್ತಡಕ್ಕೆ ಮಣಿದು ಕಾಮಗಾರಿ ಆರಂಭಿಸುತ್ತಿಲ್ಲ ಎಂದು ತುರ್ವಿಹಾಳ ಅಸಮಾಧಾನ ವ್ಯಕ್ತಪಡಿಸಿದರು.