

ಶಿವಮೊಗ್ಗ: ಸಾಮೂಹಿಕ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಸಿಎಂ ಅಭ್ಯರ್ಥಿ ಘೋಷಣೆ ಈಗ ಅಪ್ರಸ್ತುತ ಎಂದು ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 224 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅವರ ಸ್ಪರ್ಧೆಯ ವಿಷಯ ಬಿಜೆಪಿಯವರಿಗೇಕೆ ಬೇಕು. ಹಿಂದೆ ಎರಡು ಕಡೆ ಸ್ಪರ್ಧಿಸಿದ್ದರು. ಅದು ಹಿರಿಯ ನಾಯಕರಿಗೆ ಪಕ್ಷ ನೀಡಿರುವ ಗೌರವ ಎಂದರು.
90 ಸಾವಿರ ಬ್ಯಾಕ್ ಲಾಗ್ ಹುದ್ದೆ ಖಾಲಿ ಇದ್ದರೂ ಭರ್ತಿ ಮಾಡಿಲ್ಲ. ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಎಸ್ಸಿ-ಎಸ್ಟಿಯವರಿಗೆ ಮೀಸಲಾತಿ ಹೆಚ್ಚಳ ಕೂಡ ರಾಜಕೀಯದಿಂದ ಕೂಡಿದೆ ಎಂದು ದೂರಿದರು.
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರಿಗೆ ಆಗಿರುವ ಅನ್ಯಾಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು 8 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ವಕ್ತಾರ ರಣದೀಪ್‌ಸಿಂಗ್ ಸುರ್ಜೇವಾಲಾ, ಸಂಸದ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಮುಖಂಡರು ಆಗಮಿಸಲಿದ್ದು ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಕರೆತರುವ ಪ್ರಯತ್ನ ಕೂಡ ನಡೆದಿದೆ ಎಂದು ಹೇಳಿದರು.