ಮ.ಬೆಟ್ಟದಲ್ಲಿ ಸಾಮೂಹಿಕ ವಿವಾಹ 18ಕ್ಕೆ

15 HANUR 4
Published on

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹ ಮುಂಬರುವ ಸಾಮೂಹಿಕ ವಿವಾಹಕ್ಕೆ ಸ್ಪೂರ್ತಿಯಾಗಿರಬೇಕು. ಹಾಗಾಗಿ ನೀಡಿರುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಸೂಚಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಆ.18 ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಬಂಧ ಅಗತ್ಯ ಸಿದ್ಧತೆ ಕುರಿತು ನಾಗಮಲೆ ಭವನದಲ್ಲಿ ಗುರುವಾರ ಆಯೋಜಿಸಿದ್ದ ಅಧಿಕಾರಿ ಹಾಗೂ ನೌಕರರ ಸಭೆಯಲ್ಲಿ ಮಾತನಾಡಿದರು.

ಮ.ಬೆಟ್ಟದ ಮಾದಪ್ಪನ ಸನ್ನಿಧಿಗೆ ಇತ್ತೀಚಿನ ದಿನಗಳಲ್ಲಿ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಈ ದಿಸೆಯಲ್ಲಿ ಪ್ರಾಧಿಕಾರ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದರ ಮೂಲಕ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುತ್ತಿದೆ. ಇನ್ನು ಸರಳ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 1989 ರಿಂದಲೂ ಈವೆರಗೂ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸುತ್ತಿದೆ. ಇದರಿಂದ ಬಡ ಕುಟುಂಬಗಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತಿದೆ. ಈರೆಗೂ ಯಾವುದೇ ಲೋಪವಾಗದಂತೆ ನಡೆದಿದೆ. ಇದೀಗ ಆ.18 ರಂದು ಮ.ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, 95 ಜೋಡಿಗಳು ನೋಂದಣಿಯಾಗಿದ್ದಾರೆ. ಹಾಗಾಗಿ ಸುಸೂತ್ರ ವಿವಾಹ ಕಾರ್ಯಕ್ರಮಕ್ಕೆ ಈಗಾಗಲೇ ಪ್ರತಿಯೊಬ್ಬರಿಗೂ ಜವಾಬ್ದಾರಿಯನ್ನು ನೀಡಲಾಗಿದೆ. ಆದ್ದರಿಂದ ಈ ಬಗ್ಗೆ ಮುತುವರ್ಜಿ ವಹಿಸಿ ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸಬೇಕು. ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಇಂಜಿನಿಯರ್ ಸೆಲ್ವ ಗಣಪತಿ, ನೌಕರರಾದ ರವೀಂದ್ರ, ಮಹೇಶ್, ಮಹದೇವಸ್ವಾಮಿ, ಜನಾರ್ಧನ್, ನಾಗರಾಜು ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net