

ಮದ್ದೂರು: ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶನಿದೇವರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ವೈದ್ಯನಾಥಪುರ ಕದಂಬ ಜಂಗಮ ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜಾರಿಗೊಳಿಸಿರುವ ಹಲವಾರು ಸಮಾಜಮುಖಿ ಕಾರ್ಯಗಳು ಗ್ರಾಮಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇದನ್ನು ಎಲ್ಲರೂ ಸಹ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರ್.ಕೆ. ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎಲ್ಲ ವರ್ಗದರಿಗೆ ಅನುಕೂಲವಾಗಿದೆ. ಮುಂದೆಯೂ ಇದೇ ರೀತಿಯ ಹಲವಾರು ಯೋಜನೆಗಳನ್ನು ರೂಪಿಸಿ ಅನುಕೂಲ ಕಲ್ಪಿಸಲಿ ಎಂದರು.
ತಾಲೂಕಿನ ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಕನ್ಯಾಡಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಮಾಸಾಶನ ವಿತರಣೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುದಾನ, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನದೀಪ ಮೊದಲಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಲಿಂಗೇಗೌಡ, ಗ್ರಾಪಂ ಅಧ್ಯಕ್ಷೆ ಸರಸ್ವತಿ, ಮುಖಂಡ ವೆಂಕಟೇಶ್, ಕೃಷಿ ಮೇಲ್ವಿಚಾರಕ ಪವನ್, ವಲಯದ ಮೇಲ್ವಿಚಾರಕಿ ಚೇತನಾ ಇದ್ದರು.