

ಉಡುಪಿ: ಅಪಘಾತ ಹಾಗೂ ಇತರೆ ಕಾಯಿಲೆಗಳಿಂದ ಆಪತ್ತಿನಲ್ಲಿರುವ ವ್ಯಕ್ತಿಯ ಜೀವವನ್ನು ಕಾಪಾಡುವಲ್ಲಿ ರಕ್ತದಾನ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಮಾಹಿತಿಯ ಕೊರತೆ ಇದ್ದು, ರಕ್ತದಾನದ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸಿ, ಪ್ರೇರೆಪಿಸಬೇಕು. ರಕ್ತದಾನ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಮಾದರಿ ಆಗಬೇಕು ಎಂದು ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಹೇಳಿದರು.
ಪುರಭವನದಲ್ಲಿ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ ಹಾಗೂ ರಕ್ತನಿಧಿ ಕೇಂದ್ರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಮಾತನಾಡಿ, ಜಿಲ್ಲೆಯು ರಕ್ತದಾನದಲ್ಲಿ ಪ್ರಸಿದ್ಧಿ ಹೊಂದಿರುವ ಜೊತೆಗೆ ಜಿಲ್ಲೆಯ ಬ್ಲಡ್ ಬ್ಯಾಂಕ್ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ತುರ್ತು ಸಂದರ್ಭದಲ್ಲಿ ಜೀವವನ್ನು ರಕ್ಷಿಸುವಲ್ಲಿ ರಕ್ತವು ಅತ್ಯಂತ ಅವಶ್ಯವಾಗಿದ್ದು, ರಕ್ತದಾನ ಮಾಡುವ ಮುಖೇನ ಒಬ್ಬರ ಪ್ರಾಣ ಉಳಿಸುವ ಮಹಾನ್ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.
ಕಾರ್ಕಳ ಕುದುರೆಮುಖ ವನ್ಯಜಿವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ, ಮಾತನಾಡಿದರು. ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ., ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂ ಜಿಲ್ಲಾ ಅಧ್ಯಕ್ಷ ನಾಗೇಶ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ, ಸಾಮಾಜಿಕ ಅರಣ್ಯ ವಿಭಾಗದ ಡಿ.ಸಿ.ಎಫ್ ರವೀಂದ್ರ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಮೂಡುಬಿದ್ರೆ ಉಪವಿಭಾಗದ ಎ.ಸಿ.ಎಫ್ ಶ್ರೀಧರ್.ಪಿ, ಕುಂದಾಪುರ ಉಪವಿಭಾಗದ ಎ.ಸಿ.ಎಫ್ ಪ್ರಕಾಶ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು. ಕರುಣಾಕರ ಜೆ. ಆಚಾರ್ಯ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ನಿರೂಪಿಸಿ, ಜಯರಾಮ ವಂದಿಸಿದರು.