ಹಿಂದುಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

7
ಗಣೇಶನ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ವಿವಿಧ ಹಿಂದುಪರ ಸಂಘಟನೆಗಳ ಸದಸ್ಯರು ಸೋಮವಾರ ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ವಾಹನ ಸಂಚಾರ ತಡೆದ ಬೃಹತ್ ಪ್ರತಿಭಟನೆ ನಡೆಸಿದರು.
Published on

ಮದ್ದೂರು: ಪಟ್ಟಣದಲ್ಲಿ ಗಣೇಶನ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ವಿವಿಧ ಹಿಂದುಪರ ಸಂಘಟನೆಗಳ ಸದಸ್ಯರು ಸೋಮವಾರ ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ವಾಹನ ಸಂಚಾರ ತಡೆದ ಬೃಹತ್ ಪ್ರತಿಭಟನೆ ನಡೆಸಿದರು.

ಘಟನೆ ಹಿನ್ನೆಲೆಯಲ್ಲಿ ವರ್ತಕರು, ಹೋಟೆಲ್ ಮಾಲೀಕರು, ಬೀದಿಬದಿ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದರು. ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು, ಔಷಧ ಅಂಗಡಿ ಹಾಗೂ ಆಸ್ಪತ್ರೆಗಳು ಎಂದಿನಂತೆ ಕರ್ತವ್ಯ ನಿರ್ವಹಿಸಿದವು. ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಸಂಚಾರ ವಿರಳವಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಬೃಹತ್ ಪ್ರತಿಭಟನಾ ಮೆರವಣಿಗೆ: ಪಟ್ಟಣದಲ್ಲಿ ಗಣೇಶನ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ಖಂಡಿಸಿ ವಿವಿಧ ಹಿಂದುಪರ ಸಂಘಟನೆಗಳಿಂದ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಪಟ್ಣಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದಿಂದ ಬೃಹತ್ ಪ್ರತಿಭಟನಾ ಮೆರವಣಿ ಆರಂಭಿಸಲಾಯಿತು.

ಪಟ್ಟಣದ ಪೇಟೆ ಬೀದಿ ಮುಖಾಂತರ ತಾಲೂಕು ಕಚೇರಿ ವರೆಗೆ ಸಾವಿರಾರು ಹಿಂದು ಕಾರ್ಯಕರ್ತರು ಜಯ ಘೋಷ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪಟ್ಟಣದ ಪೇಟೆ ಬೀದಿಯ ಕೆಮ್ಮಣ್ಣುನಾಲೆ ಸರ್ಕಲ್ ಬಳಿಯ ಮಸೀದಿ ಬಳಿ ಧ್ವನಿ ವರ್ಧಕದ ನೃತ್ಯ ಮಾಡುತ್ತಿದ್ದ ಕುಣಿದು ಕುಪ್ಪಳಿಸಿದರು ಹಾಗೂ ಟೈರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಹಿಂದು ಸಂಘಟನೆಗಳು ಮುಖಂಡರು ಹಾಗೂ ಪೊಲೀರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಇದರಿಂದ ಕೆಲ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾದವು. ಇವರಿಗೆ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.

ನಂತರ ಪೇಟೆ ಬೀದಿಯ ಮುಖಾಂತರ ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದ ಬಳಿ ಬಂದ ಪ್ರತಿಭಟನಾಕಾರರಿಗೆ ಹೆದ್ದಾರಿಯಲ್ಲಿ ಮೆರವಣಿಗೆ ಮಾಡಲು ಅವಕಾಶ ನೀಡದೆ ಕಾರಣ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ಮತ್ತೆ ಮಾತಿನ ಚಕಮಕಿ ನಡೆಯಿತು. ನಂತರ ಪ್ರತಿಭಟನಾನಿರತರು ಹೆದ್ದಾರಿಯಲ್ಲಿ ಓಡಲು ಆರಂಭಿಸಿದರು. ಹೀಗಾಗಿ ಕೆಲ ಕಾಲ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆಯಿಂದ ಅರ್ಧ ಗಂಟೆಗೂ ಹೆಚ್ಚುಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ನಂತರ ಬೃಹತ್ ಸಂಖ್ಯೆಯ ಪ್ರತಿಭಟನಾಕಾರರು, ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಈಗಾಗಲೇ 21 ಜನರನ್ನು ಬಂಧಿಸಲಾಗಿದೆ. 2 ಪ್ರಕರಣಗಳನ್ನು ದಾಖಲಿಸಲಾಗಿದೆ. ಇಂತಹ ಘಟನೆ ನಡೆಯಬಾರದಿತ್ತು. ಇದನ್ನು ಜಿಲ್ಲಾಡಳಿತ ತೀವ್ರವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

21 ಜನರ ಬಂಧನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಈಗಾಗಲೇ 2 ಪ್ರಕರಣಗಳನ್ನು ದಾಖಲು ಮಾಡಿದ್ದು, 21 ಜನರನ್ನು ಬಂಧಿಸಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನ್ನು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್‌ಸಿಂಹ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಸಿ.ಕೆ.ಸತೀಶ್, ಮ.ನ.ಪ್ರಸನ್ನಕುಮಾರ್, ಜಿ.ಸಿ.ಮಹೇಂದ್ರ, ಗುರುಸ್ವಾಮಿ, ಸಿಪಾಯಿ ಶ್ರೀನಿವಾಸ್, ಎಂ.ಪಿ.ಮೃತ್ಯುಂಜಯ, ಅರವಿಂದ್, ಯೋಗಾನಂದ, ಕೆ.ಟಿ.ನವೀನ್, ಪ್ರಿಯಾಂಕಾ ಅಪ್ಪುಗೌಡ, ಮಂಜುನಾಥ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net