

ಚನ್ನರಾಯಪಟ್ಟಣ: ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಜನಪರ ಚಳವಳಿ ಒಕ್ಕೂಟದ ವತಿಯಿಂದ ಮೇ 30 ರಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಮಂಜುನಾಥ್ ಹೇಳಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಮತ್ತು ವೀಸಾ ರದ್ದುಪಡಿಸಬೇಕು. ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಂಟರ್ ಪೋಲು ಸಹಾಯ ಪಡೆದು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಬಂಧಿಸಬೇಕು. ಈ ಪ್ರಕರಣದ ತನಿಖೆಗಾಗಿ ವಿಶೇಷ ನ್ಯಾಯಾಲಯ ರಚಿಸಬೇಕು. ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.
ಎಲ್ಲಾ ವಿಷಯ ಗೊತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ವಿನಾ ಕಾರಣ ವಿಳಂಬ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದಿರುವ ಪತ್ರದ ಕುರಿತು ಕೇಂದ್ರ ಸರ್ಕಾರ ಅಸಡ್ಡೆಯಿಂದ ವರ್ತಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಎಸ್‌ಐಟಿ ಬಗ್ಗೆ ಲಘುವಾಗಿ ಮಾತನಾಡುವುದು ಮಾಜಿ ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.
ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮಹಿಳೆಯರ ಜತೆ ಆಪ್ತ ಸಮಾಲೋಚನೆ ಮಾಡಬೇಕು. ಅವರಿಗೆ ಆತ್ಮಸ್ಥೆರ್ಯ ತುಂಬಬೇಕು. ಕಾನೂನು ನೆರವು ಒದಗಿಸುವುದು ಮತ್ತು ಸೂಕ್ತರಕ್ಷಣೆ ನೀಡಬೇಕು. ಅನ್ಯಾಯಕ್ಕೆ ಒಳಗಾದ ಮಹಿಳೆಯರು ಎಸ್‌ಐಟಿ ಮುಂದೆ ಹಾಜರಾಗಿ ಸತ್ಯ ಹೇಳಬೇಕು ಎಂದ ಅವರು, ಈ ಚುನಾವಣೆಯಲ್ಲಿ ಪ್ರಜ್ವಲ್ ಸೋಲುವುದು ಬಹುತೇಕ ಖಚಿತ. ಒಂದು ವೇಳೆ ಗೆದ್ದು ಬಿಟ್ಟರೆ ಜನತೆ ತಲೆತಗ್ಗಿಸುವಂತಾಗುತ್ತದೆ ಎಂದು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಗೆ ಗೃಹ ಸಚಿವ ಜಿ ಪರಮೇಶ್ವರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ರೈತಸಂಘದ ಅಧ್ಯಕ್ಷ ಸಿ.ಬಿ. ರವಿ. ಆಗ್ರಹಿಸಿದರು.
ಅಹಿಂದ ವರ್ಗದ ತಾಲೂಕು ಘಟಕದ ಅಧ್ಯಕ್ಷ ಚಂದ್ರು ಮಾತನಾಡಿ. ಮೇ30 ರಂದು ಹಾಸನದಲ್ಲಿ ಏರ್ಪಡಿಸಿರುವ ಪ್ರತಿಭಟನಾ ಚಳವಳಿಯಲ್ಲಿ ಅಲ್ಪಸಂಖ್ಯಾತರು, ದಲಿತ, ಕಾರ್ಮಿಕ, ಹಿಂದುಳಿದವರ್ಗ, ಮಹಿಳಾ ಸಂಘಟನೆ, ವಿದ್ಯಾರ್ಥಿ ಸಂಘಟನೆ ಹಾಗೂ ಪ್ರಗತಿಪರರು ಭಾಗವಹಿಸುವರು ಎಂದು ಮಾಹಿತಿನೀಡಿದರು.
ಸುದ್ದಿಗೋಷ್ಠಿಯಲ್ಲಿ ಕೆ.ಎನ್. ನಾಗೇಶ್, ಎಂ.ಎಲ್. ಹರೀಶ್, ಕರಿಯಪ್ಪ, ವಾಸು ಕಲ್ಲೆರೆ, ಚಿ.ತೇಜಸ್‌ಗೌಡ ಭಾಗವಹಿಸಿದ್ದರು.