ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

Massive protest in Mysore in support of Sri Kshetra Dharmasthala
Published on

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಮಲೆಮಹದೇಶ್ವರ ರಸ್ತೆಯ ಶಿಕ್ಷಕರ ಭವನ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ನಂತರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು, ಸ್ತ್ರೀಶಕ್ತಿ ಸಂಘಟನೆಗಳ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಅವರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಷಡ್ಯಂತ್ರ ನಡೆಯುತ್ತಿದೆ. ಅನಾಮಿಕ ವ್ಯಕ್ತಿಯೊಬ್ಬ ನೀಡಿದ ದೂರಿನ ಆಧಾರದ ಮೇಲೆ ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ನಡೆಯುತ್ತಿರುವುದು ಖಂಡನೀಯ ಎಂದು ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ, ಸಂಚು ನಡೆಸಲಾಗುತ್ತಿದೆ. ಸಜ್ಜನರು ಮೌನವಹಿಸಿದರೆ ಅಧರ್ಮೀಯರ ಅಟ್ಟಹಾಸ ಹೆಚ್ಚಾ ಗಲಿದೆ. ಹಾಗಾಗಿ, ಶ್ರೀ ಕ್ಷೇತ್ರಕ್ಕೆ ಆಗುತ್ತಿರುವ ಅನ್ಯಾಯ ಸಹಿಸಿಕೊಂಡು ಕೂರದೆ ಸಜ್ಜನರು ಸಿಡಿದೇಳಬೇಕು ಎಂದು ಕರೆ ನೀಡಿದರು.

ರುಡ್‌ಸೆಟ್ ಸಂಸ್ಥೆ ಆರಂಭಿಸಿ ಲಕ್ಷಾಂತರ ಜನರಿಗೆ ತರಬೇತಿ ನೀಡಿ ಸ್ವ ಉದ್ಯೋಗ ಕೈಗೊಳ್ಳುವಂತೆ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಲವಾರು ಬಡವರ ಮನೆಗೆ ಬೆಳಕಾಗಿದ್ದಾರೆ. ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ವಿವಿಧ ಕಡೆಗಳಲ್ಲಿ ಗುಂಡಿ ತೋಡಿದರೂ ಅಸ್ತಿಪಂಜರ ದೊರೆತ್ತಿಲ್ಲ. ತಕ್ಷಣವೇ ಸರ್ಕಾರ ಪ್ರಕರಣವನ್ನು ಇತ್ಯರ್ಥಪಡಿಸಿ ಅನಾಮಿಕನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ತಪ್ಪು ಮಾಡಿದವರ ಮೇಲೆ ಕಾನೂನು ಕ್ರಮಜರುಗಿಸಲು ನಮ್ಮದೇನೂ ಅಭ್ಯಂತರವಿಲ್ಲ .ಆದರೆ, ಅನಗತ್ಯವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಆರೋಪ ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಅನಾಮಿಕ ತೋರಿಸಿದ ಜಾಗಗಳಲ್ಲಿ ಈಗಾಗಲೇ ಗುಂಡಿ ತೆಗೆದು ಪರಿಶೀಲಿಸಿದರೂ ಮೃತದೇಹ ಪತ್ತೆಯಾಗಿಲ್ಲ. ಹಾಗಾಗಿ ಕೂಲಡೇ ಎಸ್‌ಐಟಿ ತನಿಖೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ಮಾಜಿ ಶಾಸಕ ಎಲ್. ನಾಗೇಂದ್ರ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಹಿರಿಯ ವಕೀಲರಾದ ಶ್ಯಾಂ ಭಟ್, ಎಂ.ಡಿ.ಹರೀಶ್ ಕುಮಾರ್ ಹೆಗ್ಗಡೆ, ಮಾಜಿ ಮೇಯರ್‌ಗಳಾದ ಸಂದೇಶ್ ಸ್ವಾಮಿ, ಶಿವಕುಮಾರ್, ಬಿಜೆಪಿ ಮಹಿಳಾ ಮೋರ್ಚ ಮಾಜಿ ನಗರಾಧ್ಯಕ್ಷೆ ಹೇಮಾ ನಂದೀಶ್, ಮೈಮುಲ್ ನಿರ್ದೇಶಕ ಬಿ.ಎನ್. ಸದಾನಂದ, ಮೈಸೂರು ರಕ್ಷಣಾ ವೇದಿಕೆ ಅಧ್ಯಕ್ಷ ಮೈ.ಕಾ.ಪ್ರೇಮ್‌ಕುಮಾರ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net