ಧರ್ಮಸ್ಥಳ ಸಂಸ್ಥೆ ನೆರವು ಸದುಪಯೋಗವಾಗಲಿ

13blrp9
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೃತ್ತಿಪರ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗಣ್ಯರು ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ ಮಾಡಿದರು. ಹೆಬ್ಬಾಳು ಹಾಲಪ್ಪ, ಸುರೇಶ್ ಮೊಯ್ಲಿ, ಮಂಜುಳಾ, ಎಸ್.ಕೆ.ನಾಗೇಶ್, ಮಂಜುನಾಥ ಶೆಟ್ಟಿ ಇದ್ದರು.
Published on

ಬೇಲೂರು : ಪಟ್ಟಣದ ಬೇಲೂರು ಟೌನ್ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಆಯೋಜಿಸಿದ್ದ ವೃತ್ತಿಪರ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನವನ್ನು ವಿತರಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸುರೇಶ್ ಮೊಯ್ಲಿ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಮಹಿಳೆಯರ ಸಬಲೀಕರಣಕ್ಕಾಗಿ ಹತ್ತಾರು ಯೋಜನೆಗಳನ್ನು ರೂಪಿಸಿ ಸಹಕಾರ ನೀಡುತ್ತಿದೆ. ಅಲ್ಲದೆ 12 ವರ್ಷದಿಂದ ಹಾಸನ ಜಿಲ್ಲೆಯಲ್ಲಿ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಅರ್ಥಿಕ, ಪರಿಸರ, ನೀರಾವರಿ ಸೇರಿದಂತೆ ಹಲವಾರು ತೀತಿಯಲ್ಲಿ ಕೆಲಸ ಮಾಡುತ್ತಿದೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೋತ್ತರದಂತೆ 8 ವರ್ಷದಿಂದ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ 943 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗಿದೆ. ಬೇಲೂರು ತಾಲೂಕಿನಲ್ಲಿ 93 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಶಿಷ್ಯವೇತನ ಪಡೆದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉನ್ನತ ವ್ಯಾಸಂಗ ಮಾಡಿ ದೊಡ್ಡ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.

ಬೇಲೂರು ಟೌನ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಎಲ್.ಧರ್ಮೇಗೌಡ ಮಾತನಾಡಿ, ಧರ್ಮಸ್ಥಳ ಸಂಘ ಕೇವಲ ಹಣಕಾಸು ವಹಿವಾಟಿಗೆ ಸೀಮಿತವಾಗದೆ ಧಾರ್ಮಿಕ, ಶೈಕ್ಷಣಿಕ ಪ್ರಗತಿಗೆ ಮುನ್ನುಡಿ ಬರೆದು, ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಂಡು ಬದುಕು ನಡೆಸಲು ಸಹಕಾರಿಯಾಗಿದೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಕಾರ್ಯವೈಖರಿ ಮೆಚ್ಚುವಂತದ್ದಾಗಿದೆ. ಆದರೆ ಧರ್ಮಸ್ಥಳದಲ್ಲಿನ ಇತ್ತೀಚಿನ ಘಟನೆಗಳ ಬಗ್ಗೆ ಮುಖ್ಯಮಂತ್ರಿಗಳೇ ಮಾತನಾಡಿ ಸುಳ್ಳು ಅಪಪ್ರಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದಿರುವುದು ಉತ್ತಮ ಬೆಳವಣಿಗೆ ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿ, ಭಕ್ತರ ಭಾವನಾತ್ಮಕ ಧರ್ಮಸ್ಥಳ ಕ್ಷೇತ್ರದ ಮೇಲೆ ಇತ್ತೀಚಿನ ದಿನಗಳಲ್ಲಿ ಕಾಣದ ಕೈಗಳು ನಡೆಸುತ್ತಿರುವ ವಿರೋಧಿ ಕೆಲಸಕ್ಕೆ ಸರ್ಕಾರ ಭಕ್ತರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿರುವುದು ನಿಲ್ಲಬೇಕು. ಅಲ್ಲದೆ ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರುದ್ಧದ ಆರೋಪ ನಿಜಕ್ಕೂ ಶೋಚನೀಯ ಸಂಗತಿ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಂಜುಳಾ, ಜನ ಜಾಗೃತಿ ಸದಸ್ಯ ಎಸ್.ಕೆ.ನಾಗೇಶ್, ಮಂಜುನಾಥ ಶೆಟ್ಟಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net