

ಹನೂರು: ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಶಿಷ್ಟಾಚಾರದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚನೆ ನೀಡಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿಗೃಹದ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಗಡಿ ತಾಲೂಕಾದ ಹನೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಬೇಕು. ಆದ್ದರಿಂದ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಭಾಗವಹಿಸಬೇಕು. ಮುಖ್ಯ ಭಾಷಣಾಕಾರರು, ಕನ್ನಡಪರ ಸಂಘಟನೆ ಪದಾಧಿಕಾರಿಗಳನ್ನು ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿರಬೇಕು. ಮಕ್ಕಳ ಭಾಗವಹಿಸುವಿಕೆ ಹೆಚ್ಚಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಬೇಕು. ಈ ಸಂಬಂಧ ರೂಪುರೇಷೆಯನ್ನು ತಯಾರಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಹರಿಸಿ:
ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಗತ್ಯ ಕ್ರಮವಹಿಸಿ ಪರಿಹರಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಜನರು ತೊಂದರೆ ಅನುಭವಿಸವಂತಾಗಬಾರದು ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಸುಧನ್ವನಾಗ್ ಅವರಿಗೆ ಸೂಚಿಸಿದರು.
ಅಂಗನವಾಡಿ ಕೇಂದ್ರಗಳ ನಿವೇಶನ ಹಾಗೂ ಕಟ್ಟಡದ ಬಗ್ಗೆ ಕ್ರಮವಹಿಸುವಂತೆ ಸಿಡಿಪಿಒ ಅಂಬಿಕಾ ಅವರಿಗೆ ಸೂಚಿಸಿದರು. ಇದಕ್ಕೆ ಅಂಬಿಕಾ ಅವರು ಪ್ರತಿಕ್ರಿಯಿಸಿ, ನಿವೇಶನ ಅಗತ್ಯ ಸಂಬಂಧ ಈಗಾಗಲೇ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ವಡಕೆಹಳ್ಳ, ಅಂಬಿಕಾಪುರ ಸೇರಿದಂತೆ 11 ಕೇಂದ್ರಗಳಿಗೆ ಕಟ್ಟಡ ಮಂಜೂರಾತಿ ದೊರಕಿದ್ದು, ಟೆಂಡರ್ ಹಂತದಲ್ಲಿದೆ ಎಂದು ತಿಳಿಸಿದರು.
ತಹಸೀಲ್ದಾರ್ ಕೆ.ಎನ್ ಚೈತ್ರಾ, ಬಿಇಒ ಮಹೇಶ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಸಿದ್ದರಾಜು, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಉಪ ನೋಂದಣಾಧಿಕಾರಿ ಉಷಾ, ತಾಪಂ ಲೆಕ್ಕಾಧಿಕಾರಿ ಶಶಿಕಲಾ, ಪಪಂ ಆರೋಗ್ಯ ನಿರೀಕ್ಷಕ ಪ್ರಕಾಶ್, ಆರ್‌ಐ ಶೇಷಣ್ಣ ಇನ್ನಿತರರು ಇದ್ದರು.