

ಹಾಸನ: ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಸುಲಲಿತವಾಗಿ ದೇವಿ ದರ್ಶನ ಪಡೆದು ಹಿಂದಿರುಗಲು ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಸನಾಂಬ ದೇವಿ ದರ್ಶನ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕುರಿತು ಮಂಗಳವಾರ ವಿಡಿಯೋ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಯಾವ ದಿನಗಳಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ ಎಂಬುದನ್ನು ಅರಿತು ಜನದಟ್ಟಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಎಚ್ಚರ ವಹಿಸಿ ಎಂದು ತಿಳಿಸಿದರು.
ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ಸರಾಗವಾಗಿ ಸಾಗುವಂತೆ ಇದ್ದರೆ ಯಾವುದೇ ತೊಂದರೆ ಇಲ್ಲ, ಸ್ಪಲ್ಪ ಹೆಚ್ಚು ಕಡಿಮೆಯಾದರೆ ಜನರು ತಾಳ್ಮೆ ಕಳೆದುಕೊಳ್ಳುತ್ತಾರೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವಂತೆ ನಿರ್ದೇಶನ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರೆ ಯಶಸ್ಸು ಕಾಣಬಹುದು. ಪ್ರತಿದಿನದ ಸುಪ್ರಭಾತ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಲತಾಕುಮಾರಿ ಮಾತನಾಡಿ, ಎಲ್ಲ್ಲ ಸಿದ್ಧತೆಗಳಿಗೂ ಕ್ರಮವಹಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಮಾತನಾಡಿ, ಬಂದೋಬಸ್ತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು.
ನಗರದ ಸಾಲಗಾಮೆ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ 121 ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಪಾಕ ಸ್ಪರ್ಧೆ, 19 ರಂದು ಡಾಗ್ ಶೋ ಆಯೋಜಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದರು.
12 ಟೂರ್ ಪ್ಯಾಕೇಜ್ ಮಾಡಲಾಗಿದೆ. ಹೆಲಿಟೂರಿಸಂಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ನಗರದ ರಸ್ತೆ ಗುಂಡಿ ಮುಚ್ಚಲು ಕ್ರಮ ವಹಿಸಲಾಗಿದ್ದು, ಮಹಾ ನಗರಪಾಲಿಕೆಯಿಂದಲೂ ಗುಂಡಿ ಮುಚ್ಚಲು ಕ್ರಮವಹಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಗಿರೀಶ್ ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್‌ಕುಮಾರ್, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಉಪ ವಿಭಾಗಾಧಿಕಾರಿಗಳಾದ ಮಾರುತಿ, ರಾಜೇಶ್ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.