

ಬೆಂಗಳೂರು:: ಬೆಂಗಳೂರು ನಗರ ವಿಶ್ವವಿದ್ಯಾನಿಲಯವು ಸೆಂಟ್ರಲ್ ಕಾಲೇಜು ಕ್ಯಾಂಪಸ್‌ನಲ್ಲಿ ಶೀಘ್ರದಲ್ಲಿಯೇ ಎಂಸಿಎ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸುವುದಾಗಿ ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ. ರಮೇಶ್ ತಿಳಿಸಿದ್ದಾರೆ.
ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬಿಸಿಯು ಪ್ರಥಮ ಬ್ಯಾಚಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಈ ವಿಷಯ ಪ್ರಕಟಿಸಿದರು.
ಮುಖ್ಯ ಅತಿಥಿಯಾಗಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಲಿಂಗರಾಜ ಗಾಂಧಿ ಮಾತನಾಡಿ, ಭವಿಷ್ಯದ ಬೆಳವಣಿಗೆಯಲ್ಲಿ ಕೃತಕ ಬುದ್ಧಿಮತ್ತೆ ಮಹತ್ವದ ಪಾತ್ರ ವಹಿಸುವುದೆಂದು ಪ್ರತಿಪಾದಿಸಿದರು.
ಸೇವಾ ವಲಯದ ಪ್ರಾಮುಖ್ಯತೆಯು ಭಾರತದ ಆರ್ಥಿಕ ರಂಗದಲ್ಲಿ ಗಣಕ ವಿಜ್ಞಾನ ಪದವೀಧರರಿಗೆ ವಿಪುಲ ಉದ್ಯೋಗಾವಕಾಶಗಳಿದ್ದು, ಅಗತ್ಯಕ್ಕೆ ತಕ್ಕ ಕೌಶಲ ಅಭಿವೃದ್ಧಿ ಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನೂತನ ಕುಲಸಚಿವ ನವೀನ್ ಜೋಸ್ೆ, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್ ಬಿ. ಕುಡೇನಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ವಿವಿಧ ಶೈಕ್ಷಣಿಕ ಚಟುವಟಿಕೆ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.