

ಶಿವಮೊಗ್ಗ: ಕರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದ್ದು ಸ್ವಯಂ ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಜತೆಗೆ ಸೋಂಕನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಮೂಲಸೌಕರ್ಯ, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.
ಸಿಮ್ಸ್(ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ) ನಿರ್ದೇಶಕರ ಕಚೇರಿಯಲ್ಲಿ ಶನಿವಾರ ಕರೊನಾ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಮೆಗ್ಗಾನ್‌ಗೆ ಹೆಚ್ಚುವರಿಯಾಗಿ ಅಗತ್ಯವಿರುವ ಡೇಟಾ ಎಂಟ್ರಿ ಆಪರೇಟರ್‌ಗಳು, ‘ಡಿ’ ಗ್ರೂಪ್ ನೌಕರರು ಹಾಗೂ 50 ನರ್ಸ್‌ಗಳನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ಪಡೆಯಲಾಗುವುದು ಎಂದರು.
ಕಳೆದ ವರ್ಷಕ್ಕಿಂತ ಸೋಂಕಿನ ಪ್ರಮಾಣ ವೇಗವಾಗಿದ್ದು ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಗಳ ಸೋಂಕಿತರು ಮೆಗ್ಗಾನ್ ಆಸ್ಪತ್ರೆಗೆ ಬರುತ್ತಿದ್ದಾರೆ. ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು ಪ್ರಸ್ತುತ ಇರುವ ಆಕ್ಸಿಜನ್ ಬೆಡ್‌ಗಳ ಲಭ್ಯತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಅನುದಾನವನ್ನು ಎಸ್‌ಡಿಆರ್‌ಎಫ್ ಅಡಿ ಪಡೆದುಕೊಳ್ಳುವ ಕುರಿತು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಜಿಪಂ ಸಿಇಒ ಎಂ.ಎಲ್.ವೈಶಾಲಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಎಸ್.ಶ್ರೀಧರ್, ಜಿಲ್ಲಾ ಸರ್ಜನ್ ಡಾ. ಜಿ.ಶ್ರೀನಿವಾಸ್, ಸಿಮ್ಸ್ ನಿರ್ದೇಶಕ ಡಾ. ಒ.ಎಸ್.ಸಿದ್ದಪ್ಪ, ಆಡಳಿತಾಧಿಕಾರಿ ಡಾ. ಶಿವಕುಮಾರ್, ಆಡಳಿತ ಮಂಡಳಿ ಸದಸ್ಯರಾದ ಡಾ. ವಾಣಿ ಕೋರಿ, ಡಾ. ಗೌತಮ್, ದಿವಾಕರ ಶೆಟ್ಟಿ, ಡಾ. ಮಹೇಶ್ ಇದ್ದರು.