

ಮಂಡ್ಯ: ಮೈಷುಗರ್ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ 53 ಕೋಟಿ ರೂಗಳನ್ನು ಮನ್ನಾ ಮಾಡುವ ಸಂಬಂಧ ಸಂಪುಟ ಸಭೆಯಲ್ಲಿ ಕಡತ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೇ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸೂಚನೆ ಮೇರೆಗೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಅಗತ್ಯ ದಾಖಲೆಯನ್ನು ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ತರಲು ಕ್ರಮ ವಹಿಸುವಂತೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮೈಷುಗರ್ ಕಾರ್ಖಾನೆ ಎಂಡಿಗೆ ಬಾಕಿ ವಿದ್ಯುತ್ ಬಿಲ್ ಸಂಬಂಧ ವಿವರವಾದ ದಾಖಲೆ ಸಹಿತ ಕಡತವನ್ನು ಸಲ್ಲಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಎಂಡಿ ಈಗ ದಾಖಲೆಯನ್ನು ಸಲ್ಲಿಸಿದ್ದು, 2024ರ ಜು.31ರವರೆಗೆ 53,46,34,707 ರೂ ಬಾಕಿ ಇದೆ ಎಂಬುದನ್ನು ವಿವರಿಸಿದ್ದಾರೆ.