

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 46 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಟ್ವಾಳ ತಾಲೂಕು ಲೋರೆಟ್ಟೋ ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು(36) ಬಂಧಿತ ಆರೋಪಿ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ನೆಹರೂ ಮೈದಾನದ ಬಳಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆತನ ವಶದಲ್ಲಿದ್ದ 2,30,000 ರು. ಮೌಲ್ಯದ 46 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,40,500 ರೂ. ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಯ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.