ಮಾದಕ ವಸ್ತು ಎಂಡಿಎಂಎ ಮಾರಾಟ ಕುಖ್ಯಾತ ಡ್ರಗ್ಸ್ ಪೆಡ್ಲರ್ ಗಳ ಸೆರೆ

mng-27 Aug shakib
Published on

ಮಂಗಳೂರು : ನಗರದಾದ್ಯಂತ ಮಾದಕ ವಸ್ತುವಾದ ಸಿಂಥೆಟಿಕ್ ಡ್ರಗ್ಸ್ ಎಂಡಿಎಂ ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‌ನ ಶಾಕೀಬ್ ಶಬ್ಬು (33), ಚೊಕ್ಕಬೆಟ್ಟು 8ಣೇ ಬ್ಲಾಕ್‌ನ ನಿಸಾರ್ ಹುಸೈನ್ (34) ಎಂಬವರು ಬಂಧಿತರು. ಆರೋಪಿಗಳ ವಶದಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ವೋಕ್ಸ್ ವ್ಯಾಗನ್ ಕಾರು, ಮೊಬೈಲ್ ಫೋನುಗಳು-2, ನಗದು 1,800 ರೂ., ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 7,83,300 ರೂ. ಆಗಬಹುದು. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ಅಕ್ರಮವಾಗಿ ಮಾದಕ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ.ಎ. ಹೆಗಡೆ ಅವರ ನೇತೃತ್ವದ ತಂಡ ದಾಳಿ ನಡೆಸಿದೆ.


ಆರೋಪಿಗಳ ಪೈಕಿ ಶಾಕೀಬ್ ಶಬ್ಬು ಎಂಬಾತನು ಈ ಹಿಂದೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆಯತ್ನ ಪ್ರಕರಣ,ಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮೂಡುಬಿದಿರೆ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣಗಳು ಹೀಗೆ ಒಟ್ಟು 13 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ನಂತರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಿರುತ್ತದೆ.


ಇನ್ನೋರ್ವ ಆರೋಪಿ ನಿಸಾರ್ ಹುಸೈನ್ ನಿಚ್ಚು ಎಂಬಾತನು ಈ ಹಿಂದೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಮಂಗಳೂರು ಪೂರ್ವ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಮಂಗಳೂರು ದಕ್ಷಿಣ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜ್ಯಾರಿಯಲ್ಲಿರುತ್ತದೆ. ಅಲ್ಲದೇ ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ಕೂಡಾ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದನು.


ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net