ಏ. 2ರಂದು ಮೈತ್ರಿ ಪಕ್ಷಗಳ ಸಮನ್ವಯ ಸಭೆ

30 M.D.R.11
Published on

ಮದ್ದೂರು : ಜೆಡಿಎಸ್ - ಬಿಜೆಪಿ ಮೈತ್ರಿ ಪಕ್ಷಗಳ ಸಮನ್ವಯ ಸಭೆ ಏ. 2 ರಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್. ಪಿ ಸ್ವಾಮಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಗೆ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಎರಡೂ ಮೈತ್ರಿ ಪಕ್ಷಗಳ ಮುಖಂಡರುಗಳು ಭಾಗವಹಿಸಲಿದ್ದಾರೆಂದು ವಿವರಿಸಿದರು.
ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ: ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆಯಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು. ಮುಖ್ಯವಾಗಿ ನರೇಂದ್ರ ಮೋದಿ 3 ನೇ ಬಾರಿಗೆ ಪ್ರಧಾನಿಯಾಗಬೇಕು. ಅದನ್ನು ಗಮನದಲ್ಲಿಟ್ಟುಕೊಂಡು ತಾಲೂಕು ಮಟ್ಟದಲ್ಲಿ, ಮದ್ದೂರು ವಿಧಾನ ಸಭಾ ವ್ಯಾಪ್ತಿಯಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಸೂಚನೆಯನ್ವಯ ಮೈತ್ರಿ ಧರ್ಮ ಪಾಲನೆ ಮಾಡುವ ಮೂಲಕ ಕಾಂಗ್ರೆಸ್‌ಗೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು. ಮೋದಿ ಆಡಳಿತ ದೇಶ ಅಭಿವೃದ್ಧಿ ಪಥದಲ್ಲಿ ಶರವೇಗವಾಗಿ ಬೆಳೆಯುವಂತೆ ಮಾಡಿದೆ. ವಿಶ್ವದ ಅಭಿವೃದ್ಧಿ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನ ಭಾರತಕ್ಕೆ ದೊರಕಿದೆ. ಇದಕ್ಕೆ ಮೋದಿ ಅವರ ದಕ್ಷ ಹಾಗೂ ಪ್ರಾಮಾಣಿಕ ಆಡಳಿವೇ ಸಾಕ್ಷಿ ಯಾಗಿದೆ. ಮೋದಿ ಅವರನ್ನು ವಿಶ್ವ ನಾಯಕ ಎಂದು ಪ್ರತಿಯೊಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಎಸ್. ಪಿ ಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಶಿವದಾಸ್ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ಜಿ ಪಂ ಮಾಜಿ ಸದಸ್ಯ ಬೋರಯ್ಯ, ಮುಖಂಡರಾದ ಚಿಕ್ಕ ಅಂಕನಹಳ್ಳಿ ಮನು, ಡಾಬಾ ಕಿಟ್ಟಿ, ಹಾಗಲಹಳ್ಳಿ ರಘು,ಎಂ. ಸಿ. ಸಿದ್ದು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net