ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟ್ಯಾಪ್ ವಿತರಣೆ

05M.D.R.3
Published on

 ತ್ವರಿತ ಸೇವೆ ನೀಡಲು ಶಾಸಕ ಕೆ.ಎಂ.ಉದಯ ಸಲಹೆ

ಮದ್ದೂರು : ಗ್ರಾಮೀಣ ಪ್ರದೇಶದ ಜನರಿಗೆ ಪಾರದರ್ಶಕವಾಗಿ ತ್ವರಿತ ಸೇವೆ ನೀಡಬೇಕು ಎಂದು ಶಾಸಕ ಕೆ.ಎಂ.ಉದಯ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಶುಕ್ರವಾರ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟ್ಯಾಪ್ ಮತ್ತು ಇನ್ನಿತರ ಪರಿಕರಗಳನ್ನು ವಿತರಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸಮರ್ಪಕವಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲವೆಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿರುವುದಾಗಿ ತಿಳಿಸಿದರು.

ಪ್ರತಿಯೊಬ್ಬ ಅಧಿಕಾರಿಯೂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಜತೆಗೆ ಆನ್‌ಲೈನ್ ಮತ್ತು ಇ ಆಫೀಸ್‌ನಲ್ಲಿ ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸಿ ಉನ್ನತ ಅಧಿಕಾರಿಗಳಿಗೆ ರವಾನಿಸಬೇಕು ಎಂದರು.

ಫಲಾನುಭವಿಗಳ ಅರ್ಜಿಯನ್ನು ತುರ್ತಾಗಿ ವಿಲೇವಾರಿ ಮಾಡಲು ಲ್ಯಾಪ್‌ಟ್ಯಾಪ್ ನೆರವಾಗಲಿದೆ ಎಂದರು.

ತಾಲೂಕಿನ 26 ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟ್ಯಾಪ್ ವಿತರಿಸಲಾಗಿದ. ಮುಂಬರುವ ದಿನಗಳಲ್ಲಿ ಬಾಕಿ ಉಳಿದಿರುವ ಗ್ರಾಮ ಲೆಕ್ಕಾಧಿಕಾರಿಗಳಿಗೂ ಲ್ಯಾಪ್‌ಟ್ಯಾಪ್ ವಿತರಣೆ ಮಾಡಲಾಗುತ್ತದೆ. ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.

ತಾಲೂಕು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಲು ಈಗಾಗಲೇ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಆಯಾ ಇಲಾಖೆಯ ಸಚಿವರನ್ನು ಭೇಟಿ ಮಾಡಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸಚಿವರುಗಳು ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದರು. ತಹಸೀಲ್ದಾರ್ ಡಾ. ಸ್ಮಿತಾರಾಮು, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ದ್ವಿತೀಯ ದರ್ಜೆ ಸಹಾಯಕ ನವೀನ್, ಸರ್ಕಾರಿ ನೌಕರ ಸಂಘಧ ಅಧ್ಯಕ್ಷ ರವೀಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net