

ಆಲೂರು : ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಬಾರ್ಡ್ ಯೋಜನೆಯಡಿ ಸುಮಾರು 1.58. ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ ಹೆಚ್ಚುವರಿ ನಾಲ್ಕು ಕೊಠಡಿಗಳ ನಿರ್ಮಾಣಕ್ಕೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಚುನಾಯಿತ ಸರ್ಕಾರ ಹಾಗೂ ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾ ಸಂಸ್ಥೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು. ಅದನ್ನು ಬಿಟ್ಟು ಸೌಕರ್ಯ ಹಾಗೂ ಅನುದಾನ ನೀಡುವಲ್ಲಿ ತಾರತಮ್ಯ ಮಾಡುವುದರಿಂದ ಗ್ರಾಮೀಣ ಮಕ್ಕಳಿಗೆ ಸರಿಯಾದ ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಮನಗಾಣಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸತ್ಯಸಾಯಿ ಪ್ರಸಾದ್, ಸಕಲೇಶಪುರ ಪಿಡಬ್ಲ್ಯೂಡಿ ಇಲಾಖೆ ಎಇಇ ಮುರುಗೇಶ್, ಕಿರಿಯ ಇಂಜಿನಿಯರ್ ಮಧು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೂವಯ್ಯ, ತಾಲೂಕು ಅಧ್ಯಕ್ಷೆ ಉಮಾ ರವಿಪ್ರಕಾಶ್, ಖಜಾಂಚಿ ಹೇಮಂತ್, ಪ್ರಧಾನ ಕಾರ್ಯದರ್ಶಿಗಳಾದ ರುದ್ರೇಗೌಡ, ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗಣೇಶ್,ಮೋಹನ್, ಬಿಜೆಪಿ ಮುಖಂಡರಾದ ಪೂವಯ್ಯ, ಲೋಕೇಶ್, ಅಜಿತ್, ಬಾಲಾಲೋಚನ, ಹನುಮಂತೇಗೌಡ, ರವಿ ಕೆ.ಗೌಡ, ವೆಂಕಟೇಶ್ ಮುಂತಾದವರು ಹಾಜರಿದ್ದರು.