ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವೈದ್ಯ ಕಾಲೇಜು 3-4 ವರ್ಷಗಳಲ್ಲಿ ಪ್ರಾರಂಭ; ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

MADIKERI
Published on

ಮಡಿಕೇರಿ: ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 3-4 ವರ್ಷಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನ 450 ಹಾಸಿಗೆ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಸೋಮವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ನೆರವು ಪಡೆದು ಮೊದಲ ಹಂತದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಇತರ ಜಿಲ್ಲೆಗಳಲ್ಲಿಯೂ ಸರ್ಕಾರಿ ವೈದ್ಯಕೀಯ ಆಸ್ಪತ್ರೆ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಆರೋಗ್ಯ, ಕೃಷಿ ಮತ್ತು ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಪ್ರತಿಯೊಬ್ಬರಿಗೂ ವೈದ್ಯಕೀಯ ಸವಲತ್ತು ದೊರೆಯುವಂತಾಗಬೇಕು. ಅದಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಬಡವರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಹೇಳಿದರು.

ಸಿಎಂ ಮೌನ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿರುವ ಪ್ರತಿಯೊಬ್ಬರಿಗೂ ಸಚಿವ ಸ್ಥಾನ ನೀಡಬೇಕೆಂದು ಸಚಿವ ವಿ.ಶ್ರೀನಿವಾಸ ಪ್ರಸಾದ್ ಅಭಿಪ್ರಾಯ ಹಾಗೂ ಕೊಡಗಿಗೆ ಸಚಿವ ಸ್ಥಾನ ಸಿಗಲಿದೆಯೇ ಎಂದು ಹೆಲಿಪ್ಯಾಡ್​ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಯಾವ ಪ್ರತಿಕ್ರಿಯೆ ನೀಡದೆ ಸಿಎಂ ಮೌನವಾಗಿ ನಿರ್ಗಮಿಸಿದರು. ಅದಕ್ಕೂ ಮೊದಲು ಮಾತನಾಡಿ, ದಾವೋಸ್​ನಲ್ಲಿ 60ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿದ್ದೇನೆ. ಅವರು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಹೆಚ್ಚಿನ ಒಲವು ತೋರಿ ದ್ದಾರೆ. ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net