ವಿವಿಧ ಇಲಾಖೆಗಳ ಸಾಮಾನ್ಯ ಸಭೆ

18mdk09
Published on

ಮಡಿಕೇರಿ:

ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಸಾಮಾನ್ಯ ಸಭೆ ಜಿ.ಪಂ. ಉಪ ಕಾರ್ಯದರ್ಶಿ ಜಗದೀಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಈ ವೇಳೆ ಮಾತನಾಡಿದ ಅವರು ಶಿಕ್ಷಣ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲಹೆ ನೀಡಿದರು. ನರೇಗಾ ಯೋಜನೆಯಡಿ ಶಾಲಾ ಶೌಚಾಲಯ ಕಾಮಗಾರಿ ತೆಗೆದುಕೊಳ್ಳಲಾಗಿದ್ದು, ಶೀಘ್ರ ಪೂರ್ಣಗೊಳಿಸಲಾಗುವುದು.

ಮಳೆಗಾಲ ಪ್ರಾರಂಭವಾಗಿದ್ದು ಶಾಲಾ ಕಟ್ಟಡ ದುರಸ್ತಿಗಳಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ಯಾವುದೇ ರೀತಿ ಹಾನಿಯಾಗದಂತೆ ನೋಡಿಕೊಳ್ಳಬೇಕು. ಹಾಡಿಗಳಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆ ಹೆಚ್ಚು ಗಮನ ನೀಡಬೇಕು. ಅನುದಾನದ ಕೊರತೆಗಳಿದ್ದರೆ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಪೂರಕವಾಗಿ ನೀಡಲಾಗುತ್ತಿದೆ. ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ನರೇಗಾ ಯೋಜನೆಯಡಿ ಹಲವು ವೈಯಕ್ತಿಕ ಸೌಲಭ್ಯಗಳಿದ್ದು ಸದುಪಯೋಗಪಡಿಸಿಕೊಳ್ಳಲು ಜನರಿಗೆ ಮಾಹಿತಿ ನೀಡಿ ಎಂದು ನರೇಗಾ ತಾಂತ್ರಿಕ ಸಹಾಯಕ ಅಭಿಯಂತರಿಗೆ ತಿಳಿಸಿದರು.

ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net