

ತುಮಕೂರು: ಕರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನುಸರಿಸಿ ಗಣೇಶೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗಣೇಶೋತ್ಸವ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಕರೊನಾ ನಿಯಂತ್ರಿಸುವ ಸಲುವಾಗಿ ಸರ್ಕಾರದ ಮಾರ್ಗಸೂಚಿಗಳನ್ವಯ ಗಣೇಶೋತ್ಸವ ಆಚರಿಸಲು ನಿರ್ದೇಶಿಸಿದ್ದು, ಅದರಂತೆ ಗಣೇಶನ ಮೂರ್ತಿ ಷರತ್ತಿಗೊಳಪಟ್ಟು ಪ್ರತಿಷ್ಠಾಪಿಸಬೇಕು ಎಂದರು.
ಹಬ್ಬ ದೇವಸ್ಥಾನ, ಮನೆ, ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು. ಗಣೇಶಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ, ಮನೆಗಳಲ್ಲಿ 2 ಅಡಿಗೆ ಮೀರದಂತೆ ಪ್ರತಿಷ್ಠಾಪಿಸಬೇಕು. ಪಾರಂಪರಿಕ ಗಣೇಶೋತ್ಸವಕ್ಕಾಗಿ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮುನಿಸಿಪಲ್ ಕಾರ್ಪೋರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು ಎಂದರು.
ಕಾರ್ಯಕ್ರಮದ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು, 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತರಿಗೆ ಅನುವು ಮಾಡುವುದು. ಗಣೇಶಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಮನರಂಜನಾ ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ, ಈ ಬಗ್ಗೆ ಪೊಲೀಸ್ ಹಾಗೂ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯ ಎಂದರು.
ಗಣೇಶ ಮೂರ್ತಿ ತರುವಾಗ, ವಿಸರ್ಜಿಸುವಾಗ ಮೆರವಣಿಗೆ ಮಾಡುವುದು ಹಾಗೂ ಪಟಾಕಿ ಮತ್ತು ಸ್ಫೋಟಕ ಬಳಕೆ ಸಂಪೂರ್ಣವಾಗಿ ನಿರ್ಬಂಧಿಸಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಸರ್ಕಾರಿ, ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ಸಮೀಪವಿರುವ ಮಾರ್ಗ ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು ಎಂದರು.
ಗಣೇಶೋತ್ಸವ ಆಚರಣೆ ಸಂಬಂಧ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ, ಈ ಸಮಿತಿಯು ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲಿದೆ ಹಾಗೂ ಮೇಲ್ವಿಚಾರಣೆ ನಡೆಸಲಿದೆ. ಅದೇ ರೀತಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಹಾಗೂ ಮೇಲ್ವಿಚಾರಣೆಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡುವಂತೆ ಸೂಚಿಸಿದರು. ಎಸ್‌ಪಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ಪಾಲಿಕೆ ಆಯುಕ್ತೆ ರೇಣುಕಾ, ಡಿವೈಎಸ್‌ಪಿ ತಿಪ್ಪೇಸ್ವಾಮಿ, ನಗರ ಯೋಜನಾ ನಿರ್ದೇಶಕ ರಂಗಸ್ವಾಮಿ, ಡಿಎಚ್‌ಒ ಡಾ.ನಾಗೇಂದ್ರಪ್ಪ ಹಾಗೂ ಜಿಲ್ಲಾ ಸರ್ಜನ್ ಡಾ.ವೀರಭದ್ರಯ್ಯ ಇದ್ದರು.
ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ಕಡ್ಡಾಯ. ತುಮಕೂರಿನಲ್ಲಿ ಮಹಾನಗರ ಪಾಲಿಕೆ ಹಾಗೂ ತಹಸೀಲ್ದಾರ್‌ಗಳ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗಿದೆ. ಅನುಮತಿ ಇಲ್ಲದೆ ಗಣೇಶೋತ್ಸವ ಆಯೋಜಿಸಿದರೆ ಸರ್ಕಾರದ ನಿರ್ದೇಶನದಂತೆ ಕಾನೂನು ಕ್ರಮ ಜರುಗಿಸಲಾಗುವುದು. ಡಾ.ಕೆ.ವಂಶಿಕೃಷ್ಣ ಪೊಲೀಸ್ ವರಿಷ್ಠಾಧಿಕಾರಿ