11ರಂದು ಗ್ಯಾರಂಟಿ ಫಲಾನುಭವಿಗಳ ಸಮಾವೇಶ

06M.D.R.1
ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣಕ್ಕೆ ಶಾಸಕ ಕೆ.ಎಂ.ಉದಯ್ ಭೇಟಿ ನೀಡಿ ಪರಿಶೀಲಿಸಿದರು. ಸೋಮಶೇಖರ್, ಎಲ್.ಸಂದೀಪ್, ರವಿಂದ್ರಬಿಗೌಡ, ಸಿ.ಎಚ್.ಕಾಳೀರಯ್ಯ, ಪರಮೇಶ, ಕದಲೂರು ರಾಮಕೃಷ್ಣ ಇದ್ದರು.
Published on

ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆ.11ರ ಬೆಳಗ್ಗೆ 10 ಗಂಟೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಇತರ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಸಮಾವೇಶ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಶಾಮಿಯಾನ, ಆಸನ ಮತ್ತು ಊಟದ ವ್ಯವಸ್ಥೆ ಸೇರಿದಂತೆ ಮೂಲಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸೋಮವಾರ ಚರ್ಚೆ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇತಿಹಾಸ ಸೃಷ್ಟಿಸುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನತೆಗೆ ಸಮರ್ಪಣೆ ಮಾಡಲಾಗಿದೆ. ಬಡವರಿಗೆ ಹಲವು ಜನಪರ ಯೋಜನೆಗಳನ್ನು ಸರ್ಕಾರ ನೀಡಿದ್ದು, ಅದನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ದೃಷ್ಟಿಯಿಂದ ಹಾಗೂ ಈ ಸೌಲಭ್ಯಗಳಿಂದ ವಂಚಿತರಾದವರಿಗೆ ಸೌಲಭ್ಯ ಪಡೆಯುವಂತೆ ಅರಿವು ಮೂಡಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಮನವರಿಕೆ ಜತೆಗೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ವಿವಿಧ ಇಲಾಖೆಯ ಸ್ಟಾಲ್‌ಗಳನ್ನು ನಿರ್ಮಿಸಿ ರೈತರಿಗೆ ಸೌಲಭ್ಯಗಳ ಸಿಗುವ ಬಗ್ಗೆ ಮಾಹಿತಿ ನೀಡಲಾಗುವುದು. ಸಮಾವೇಶಕ್ಕೆ ತಾಲೂಕಿನ ಪ್ರತಿ ಗ್ರಾಪಂನಿಂದ ಕನಿಷ್ಠ 150 ಫಲಾನುಭವಿಗಳನ್ನು ಸಾರಿಗೆ ಬಸ್ ಮೂಲಕ ಕರೆತರಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಮಾವೇಶ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಸಚಿವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು.

ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ತಾಪಂ ಇಒ ಎಲ್.ಸಂದೀಪ್, ಟಿಎಚ್‌ಒ ರವೀಂದ್ರ ಬಿ.ಗೌಡ, ಬಿಇಒ ಸಿ.ಎಚ್.ಕಾಳಿರಯ್ಯ, ಕೃಷಿ ಅಧಿಕಾರಿ ಪರಮೇಶ, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರವೀಣ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಮುಖಂಡರಾದ ಡಾಬಾ ಮಹೇಶ್, ವಿಜಯ್ ಕುಮಾರ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net