ಒಂದು ದಿನದ ವೇತನ ಕೊಡಿ: ಜಿಲ್ಲಾಧಿಕಾರಿ ಡಾ.ಕುಮಾರ ಮನವಿ

Meeting with Govt employees Mandya
Published on

ಮಂಡ್ಯ: ನಗರದ ಹೊರವಲಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ಸಂಬಳ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಬಳ ನೀಡುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಒತ್ತಾಯವಿಲ್ಲ. ಅಧಿಕಾರಿ ಹಾಗೂ ಸಿಬ್ಬಂದಿ ಪ್ರೀತಿ ಪೂರ್ವಕವಾಗಿ ನೀಡಬಹುದು. ಇದಲ್ಲದೆ ವಿವಿಧ ಸಂಘ ಸಂಸ್ಥೆ, ಕನ್ನಡ ಪರ ಹೋರಾಟ ಸಂಘ ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಪ್ರತಿಯೊಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನವು ಕೇವಲ ವೈಯಕ್ತಿಕ ಹಬ್ಬವಾಗಿರದೆ, ಕನ್ನಡದ ಐಕ್ಯತೆಯನ್ನು ಸಾರುವ, ಪ್ರತಿಬಿಂಬಿಸುವ ಪ್ರತಿಯೊಬ್ಬ ಕನ್ನಡಿಗರ ಮನೆಯ ಹಬ್ಬವಾಗಿದೆ. ಸಾರ್ವಜನಿಕರು, ಎಲ್ಲ ನೌಕರರು ಕೂಡ ತಮ್ಮ ಮನೆಯ ಹಬ್ಬವೆಂದು ಭಾವಿಸಿ ಸಂಭ್ರಮ, ಸಡಗರದಿಂದ ಆಚರಿಸೋಣ. ವಿವಿಧ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ 10 ಜನ ಕನ್ನಡಿಗರಿಗೆ ಸನ್ಮಾನ ಹಾಗೂ ಸಮ್ಮೇಳನ ನಡೆಯುವ ದಿನದಂದು ರಜೆ ನೀಡುವ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಜಿಲ್ಲೆಯ ಎಲ್ಲ ಸಿಬ್ಬಂದಿ ಹಾಗೂ ನಾಗರಿಕರಿಗೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಹೆಚ್ಚು ಗೌರವವಿದೆ. ಜಿಲ್ಲೆಗೆ ದೊರಕಿರುವ ಕನ್ನಡ ಸಾಹಿತ್ಯ ಸಮ್ಮೇಳನ ಹಬ್ಬದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಜಿಲ್ಲೆಯ ಹಿತಾಸಕ್ತಿಗಾಗಿ ಕಾರ್ಯ ನಿರ್ವಹಿಸೋಣ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಸಮ್ಮೇಳನಕ್ಕೆ ಸಂಬಂಧಿಸಿದಂತೆ ಒಟ್ಟು 28 ಸಮಿತಿಗಳು ಈಗಾಗಲೇ ಸಿದ್ಧತೆ ನಡೆಸುತ್ತಿದೆ. 30 ವರ್ಷಗಳ ನಂತರ ಜಿಲ್ಲೆಗೆ ಸಿಕ್ಕಿರುವ ಅವಕಾಶ ಇದಾಗಿದ್ದು, ಈ ಅದ್ಭುತ ಸಮ್ಮೇಳನಕ್ಕೆ ಮಾನಸಿಕ ಹಾಗೂ ಆರ್ಥಿಕವಾಗಿ ಪ್ರತಿಯೊಬ್ಬರ ಸಹಕಾರ ಮುಖ್ಯ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ನಾಗೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭುಗೌಡ ಮಾತನಾಡಿದರು. ಕಸಾಪ ಸಮ್ಮೇಳನದ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net