

ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಆ.14ರಂದು ಮೆಗಾ ಲೋಕ ಅದಾಲತ್ ಅಯೋಜಿಸಲಾಗಿದೆ.
ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಹಾಗೂ ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ ಅಮಾನ್ಯದ ಪ್ರಕರಣ, ಬ್ಯಾಂಕ್ ಸಾಲದ ವಸೂಲಾತಿ ಪ್ರಕರಣ, ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಭೂ-ಸ್ವಾಧೀನ ಪರಿಹಾರ ಪ್ರಕರಣ, ಭೂ-ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್.ಸುಬ್ರಮಣ್ಯ ತಿಳಿಸಿದ್ದಾರೆ.